ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮತದಾರರ ಪಟ್ಟಿ ಪರಿಷ್ಕರಣೆ (SIR) ಯಲ್ಲಿ ಆದ ಲೋಪದೋಷಗಳ ವಿರುದ್ಧ, ಕೇಂದ್ರ ಚುನಾವಣಾ ಆಯೋಗದ ಆಯುಕ್ತರಾದ ಜ್ಯಾನೇಶ್ವರಕುಮಾರ್ ಅವರ ಬಗ್ಗೆ ಆಧಾರ ರಹಿತವಾಗಿ ಆರೋಪಿಸಿ ತೇಜೋವಧೆ ಮಾಡುತ್ತಿರುವ ಕಾಂಗ್ರೆಸ್ ವಿರುದ್ಧ ಹಾಗೂ ಬರಗಾಲ ದಿಂದ ಸಂಕಷ್ಟದಲ್ಲಿರುವ ಅನ್ನದಾತರಿಗೆ ಹೆಚ್ಚಿನ ಬರ ಪರಿಹಾರ ನೀಡುವುದು ಸೇರಿ ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಅಕ್ಟೋಬರ್ 12 ರಂದು ದೇಶ ಭಕ್ತ ಜಾಗೃತ ಮತದಾರರ ವೇದಿಕೆ ವತಿಯಿಂದ ವಿಜಯಪುರ ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 11ಕ್ಕೆ ಸಿದ್ಧೇಶ್ವರ ದೇವಸ್ಥಾನ ಆವರಣ ದಿಂದ ಆರಂಭಗೊಳ್ಳಲಿರುವ ಬೃಹತ್ ಪ್ರತಿಭಟನಾ ಮೆರವಣಿಗೆ ಗಾಂಧಿ ಚೌಕ್, ಬಸವೇಶ್ವರ ವೃತ್ತ, ಡಾ.ಬಾಬಾ ಸಾಹೇಬ ಅಂಬೇಡ್ಕರ್ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಲಾಗುವುದು.
ಈ ಬೃಹತ್ ಹೋರಾಟದಲ್ಲಿ ಜಿಲ್ಲೆಯ ಎಲ್ಲ ಭಾಗದ ರೈತರು, ಮುಖಂಡರು, ದೇಶಭಕ್ತರು, ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿ, ಯಶಸ್ವಿಗೊಳಿಸಲು ಸ್ವಾಮಿ ವಿವೇಕಾನಂದ ಸೇನೆಯ ಅಧ್ಯಕ್ಷ ಚಂದ್ರಶೇಖರ ಚೌಧರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

