ಉದಯರಶ್ಮಿ ದಿನಪತ್ರಿಕೆ
ಬೆಳಗಾವಿ: ಆಡಳಿತದಲ್ಲಿ ಪಾರದರ್ಶಕತೆ, ಹಾಗೂ ಉತ್ತರದಾಯಿತ್ವವನ್ನು ಖಾತರಿಪಡಿಸುವಲ್ಲಿ ಮಾಹಿತಿ ಹಕ್ಕು ಕಾಯ್ದೆ ಮಹತ್ವದ ಪಾತ್ರ ವಹಿಸುತ್ತದೆ.
ಈ ಕಾಯ್ದೆಯಡಿ ಸಾರ್ವಜನಿಕರಿಗೆ ನಿಗದಿತ ಕಾಲಮಿತಿಯಲ್ಲಿ ಸೂಕ್ತ ಮಾಹಿತಿ ಒದಗಿಸುವುದು ಅಧಿಕಾರಿಗಳ ಕರ್ತವ್ಯವಾಗಿದೆ ಎಂದು ರಾಜ್ಯ ಮಾಹಿತಿ ಆಯುಕ್ತ ಪ್ರಕಾಶ ನಾರಾಯಣ ಚನ್ನಾಳ ಹೇಳಿದರು.
ಕರ್ನಾಟಕ ಮಾಹಿತಿ ಆಯೋಗದ ಬೆಳಗಾವಿ ಪೀಠದಲ್ಲಿ ಇತ್ತಿಚಿಗೆ ಆಯೋಜಿಸಿದ್ದ ಮಾಹಿತಿ ಹಕ್ಕು ಕಾಯ್ದೆ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
೨೦೦೫ರ ಅಕ್ಟೋಬರ್ ೧೨ರಂದು ಜಾರಿಗೆ ಬಂದ ಮಾಹಿತಿ ಹಕ್ಕು ಕಾಯ್ದೆಯು ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರುವುದರೊಂದಿಗೆ ಸರ್ಕಾರಿ ಅಧಿಕಾರಿಗಳನ್ನು ಸಾರ್ವಜನಿಕರಿಗೆ ಉತ್ತರದಾಯಿಗಳನ್ನಾಗಿಸಿದೆ. ಸಾರ್ವಜನಿಕರಿಗೆ ಅಗತ್ಯ ಮಾಹಿತಿ ಸುಲಭವಾಗಿ ದೊರೆಯುವಂತೆ ಮಾಡುವುದರ ಜತೆಗೆ ಸರ್ಕಾರಿ ಸೇವೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಕಾಯ್ದೆ ಸಹಕಾರಿಯಾಗಿದೆ.ಈ ನಿಟ್ಟಿನಲ್ಲಿ ಅಧಿಕಾರಿ, ಸಿಬ್ಬಂದಿ ಸಾರ್ವಜನಿಕರಿಗೆ ಸಮರ್ಪಕವಾಗಿ ಮಾಹಿತಿ ಒದಗಿಸಬೇಕು ಎಂದು ಅವರು ತಿಳಿಸಿದರು.
ಕರ್ನಾಟಕ ಮಾಹಿತಿ ಆಯೋಗದ ಬೆಳಗಾವಿ ಪೀಠದಲ್ಲಿ ಅರ್ಜಿಗಳು ಹಾಗೂ ಮೇಲ್ಮನವಿಗಳ ವಿಚಾರಣೆ ಮತ್ತು ವಿಲೇವಾರಿ ಕಾರ್ಯಗಳನ್ನು ತ್ವರಿತವಾಗಿ ಕೈಗೊಳ್ಳಲಾಗುತ್ತಿದೆ. ಆಯೋಗದ ಅಧಿಕಾರಿಗಳು ತಂಡವಾಗಿ ಕಾರ್ಯನಿರ್ವಹಿಸುವ ಮೂಲಕ ಸಾರ್ವಜನಿಕರಿಗೆ ಕಾಯ್ದೆಯ ಆಶಯದಂತೆ ಮಾಹಿತಿ ದೊರೆಯುವಂತೆ ಕ್ರಮವಹಿಸಲಾಗುತ್ತಿದೆ ಎಂದು ಹೇಳಿದರು.
ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಕೆಯಾಗುವ ಅರ್ಜಿಗಳಿಗೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ನಿಗದಿತ ಕಾಲಮಿತಿಯೊಳಗೆ ಸೂಕ್ತ ಹಾಗೂ ಸಮರ್ಪಕ ಮಾಹಿತಿ ಒದಗಿಸಬೇಕು. ಮಾಹಿತಿ ನೀಡುವಲ್ಲಿ ವಿಳಂಬ ಅಥವಾ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ನಿಯಮಾನುಸಾರ ದಂಡ ವಿಧಿಸುವುದರ ಜತೆಗೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಮಾಹಿತಿ ನೀಡಲು ವಿಫಲರಾದ ವಿವಿಧ ಇಲಾಖೆಗಳ ಅಧಿಕಾರಿಗಳ ವಿರುದ್ಧ ದಂಡ ಮತ್ತು ಶಿಸ್ತು ಕ್ರಮ ಜರುಗಿಸಲಾಗಿದೆ ಎಂದು ಅವರು ತಿಳಿಸಿದರು.
ಸಾರ್ವಜನಿಕರಿಗೆ ಮಾಹಿತಿ ಹಕ್ಕಿನ ಕುರಿತು ಅರಿವು ಮೂಡಿಸುವುದರೊಂದಿಗೆ ಸರ್ಕಾರಿ ಇಲಾಖೆಗಳ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವವನ್ನು ಬಲಪಡಿಸುವುದು ಅಗತ್ಯವಾಗಿದೆ. ಅಧಿಕಾರಿಗಳು ಕಾಯ್ದೆಯ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಬೇಕು ಎಂದು ಅವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

