ಪೂರ್ವಭಾವಿ ಸಭೆ | ಕನ್ನಡಾಂಬೆಯ ಭವ್ಯ ಮೆರವಣಿಗೆ | ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಒತ್ತು | ತಹಶಿಲ್ದಾರ ಸಂತೋಷ ಮ್ಯಾಗೇರಿ ಹೇಳಿಕೆ
ಉದಯರಶ್ಮಿ ದಿನಪತ್ರಿಕೆ
ಕೊಲ್ಹಾರ: ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಎಲ್ಲ ಇಲಾಖೆಗಳ ಅಧಿಕಾರಿಗಳು, ಕನ್ನಡಪರ ಸಂಘಟನೆಗಳು ಹಾಗೂ ಸಾರ್ವಜನಿಕರ ಸಹಭಾಗಿತ್ವದಲ್ಲಿ ಅತ್ಯಂತ ವಿಜೃಂಭಣೆಯಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ತಹಶೀಲ್ದಾರ್ ಸಂತೋಷ ಮ್ಯಾಗೇರಿ ಹೇಳಿದರು.
ಪಟ್ಟಣದ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕನ್ನಡ ನಾಡು, ನುಡಿ, ಸಂಸ್ಕೃತಿ ಹಾಗೂ ಪರಂಪರೆಯ ಹಿರಿಮೆಯನ್ನು ಸಾರುವ ರೀತಿಯಲ್ಲಿ ರಾಜ್ಯೋತ್ಸವ ಆಚರಿಸಬೇಕು. ಕನ್ನಡಾಂಬೆಯ ಭವ್ಯ ರಥಮೆರವಣಿಗೆ, ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಕನ್ನಡದ ವೈಭವ ಬಿಂಬಿಸುವ ಕಲಾತಂಡಗಳ ಪ್ರದರ್ಶನಕ್ಕೆ ಆದ್ಯತೆ ನೀಡಬೇಕು. ಕಾರ್ಯಕ್ರಮದ ಯಶಸ್ಸಿಗೆ ಎಲ್ಲ ಇಲಾಖೆಗಳ ಅಧಿಕಾರಿಗಳು ಹಾಗೂ ಸಂಘಟನೆಗಳ ಪದಾಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಕನ್ನಡ ಭಾಷಾ ವಿಷಯದಲ್ಲಿ ಅತ್ಯಧಿಕ ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸುವ ಕುರಿತು ಸಭೆಯಲ್ಲಿ ನಿರ್ಧರಿಸಲಾಯಿತು. ರಾಜ್ಯೋತ್ಸವದ ವಿಶೇಷ ಉಪನ್ಯಾಸ ನೀಡಲು ರಾಜ್ಯ ಪ್ರಶಸ್ತಿ ಪುರಸ್ಕೃತ ಪ.ಗು. ಸಿದ್ದಾಪುರ ಅವರನ್ನು ಆಯ್ಕೆ ಮಾಡಲಾಯಿತು.
ಕನ್ನಡಾಂಬೆಯ ರಥಮೆರವಣಿಗೆ ಸಾಗುವ ಮಾರ್ಗ, ಮೆರವಣಿಗೆಯಲ್ಲಿ ಭಾಗವಹಿಸುವ ಸಾಂಸ್ಕೃತಿಕ ಕಲಾತಂಡಗಳು, ಕನ್ನಡ ನಾಡಿನ ಇತಿಹಾಸ ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ವಿವಿಧ ರೂಪಕಗಳು, ಕನ್ನಡಾಂಬೆಯ ಮಕ್ಕಳ ಭಾಗವಹಿಸುವಿಕೆ ಸೇರಿದಂತೆ ಕಾರ್ಯಕ್ರಮದ ರೂಪುರೇಷೆಗಳ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಿತು.
ಕಾರ್ಯಕ್ರಮವನ್ನು ಶಿಸ್ತುಬದ್ಧವಾಗಿ ನಡೆಸುವ ಕುರಿತು ಅಧಿಕಾರಿಗಳು ಹಾಗೂ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಸಲಹೆಗಳನ್ನು ನೀಡಿದರು.
ಸಭೆಯಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ದಸ್ತಗೀರ ಕಲಾದಗಿ, ಉಪಾಧ್ಯಕ್ಷೆ ರಾಜಮಾ ನದಾಫ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸುನೀಲ ಮದ್ದಿನ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ವೀರೇಶ ಹಟ್ಟಿ, ಪಿಎಸ್ಐ ಅಶೋಕ ನಾಯಕ, ಕನ್ನಡಪರ ಸಂಘಟನೆಗಳ ಪ್ರಮುಖರಾದ ಮಹಾಂತೇಶ ಗಿಡ್ಡಪ್ಪಗೋಳ, ರವಿ ಗೊಳಸಂಗಿ, ನಾಗರಾಜ ಕುಂಬಾರ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎಸ್. ಬಾಲಗೊಂಡ, ಡಿಎಸ್ಎಸ್ ಅಧ್ಯಕ್ಷ ದಶರಥ ಈಟಿ, ಪಟ್ಟಣ ಪಂಚಾಯಿತಿ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಶಾಲಾ ಕಾಲೇಜುಗಳ ಮುಖ್ಯಶಿಕ್ಷಕರು ಉಪಸ್ಥಿತರಿದ್ದರು.

