ಮಾನಸಿಕ ಆರೋಗ್ಯ & ಯೋಗಕ್ಷೇಮ ಕುರಿತ ಕಾರ್ಯಕ್ರಮದಲ್ಲಿ ಖ್ಯಾತ ಮನೋರೋಗ ತಜ್ಞ ಡಾ. ಮಂಜುನಾಥ ಮಸಳಿ ಅಭಿಮತ
ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ಮನಸ್ಸನ್ನು ಸರಿಯಾಗಿ ಅರ್ಥಮಾಡಿಕೊಂಡು, ದೈನಂದಿನ ಭಾವನೆಗಳನ್ನು ಸಮಚಿತ್ತದಿಂದ ನಿಭಾಯಿಸುತ್ತಾ ಜೀವನದ ಸವಾಲುಗಳನ್ನು ಧೈರ್ಯದಿಂದ ಎದುರಿಸುವುದೇ ನಿಜವಾದ ಮಾನಸಿಕ ಆರೋಗ್ಯ ಎಂದು ಖ್ಯಾತ ಮನೋರೋಗ ತಜ್ಞರಾದ ಡಾ. ಮಂಜುನಾಥ ಮಸಳಿ ಅಭಿಪ್ರಾಯಪಟ್ಟರು.
ಪಟ್ಟಣದ ಮಾದರಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಮಾನಸಿಕ ಆರೋಗ್ಯ ಹಾಗೂ ಯೋಗಕ್ಷೇಮ ಕುರಿತ ವಿಶೇಷ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಆರೋಗ್ಯವೇ ಭಾಗ್ಯ ಎಂಬ ನಾಣ್ನುಡಿಯಂತೆ ಪ್ರತಿಯೊಬ್ಬರೂ ದೈಹಿಕ ಆರೋಗ್ಯದಷ್ಟೇ ಮಾನಸಿಕ ಸ್ವಾಸ್ಥ್ಯಕ್ಕೂ ಆದ್ಯತೆ ನೀಡಬೇಕು. ವಿದ್ಯಾರ್ಥಿ ದೆಸೆಯಲ್ಲಿ ಎದುರಾಗುವ ಗೊಂದಲ ಹಾಗೂ ಒತ್ತಡಗಳನ್ನು ಸಕಾರಾತ್ಮಕ ಚಿಂತನೆಗಳ ಮೂಲಕ ಮೆಟ್ಟಿ ನಿಲ್ಲಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ. ಎಸ್. ಎಲ್. ಪಾಟೀಲ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಸಮಸ್ಯೆಗಳು ಎದುರಾದಾಗ ಧೃತಿಗೆಡದೆ, ಆರಂಭದಲ್ಲೇ ಅವುಗಳ ಮೂಲ ಕಾರಣವನ್ನು ಅರಿತು ಪರಿಹರಿಸಿಕೊಳ್ಳಲು ಪ್ರಯತ್ನಿಸಿದರೆ ಮಾನಸಿಕ ಒತ್ತಡವನ್ನು ಗಣನೀಯವಾಗಿ ಕಡಿಮೆ ಮಾಡಿಕೊಳ್ಳಬಹುದು ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಧ್ಯಾಪಕರಾದ ಲತಾಶ್ರೀ ಡಿ.ಪಿ., ಡಾ. ಅನಿಲಕುಮಾರ್ ಡಿಗ್ಗೆ, ಬಸವರಾಜ ಪೂಜಾರ ಸೇರಿದಂತೆ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

