ಬ್ಯಾಕೋಡ ಗ್ರಾಪಂ ವ್ಯಾಪ್ತಿಯಲ್ಲಿ ಮೂಲಸೌಕರ್ಯಗಳ ಪರಿಶೀಲಿಸಿದ ಜಿ.ಪಂ. ಸಿಇಒ ಆನಂದ ಪ್ರಕಾಶ ಮೀನಾ ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕುಡಿಯುವ ನೀರಿನ ಸಮಸ್ಯೆಗೆ ತುರ್ತು ಪರಿಹಾರ ಕಲ್ಪಿಸುವುದರ ಜತೆಗೆ ಗ್ರಾಮೀಣ ಉದ್ಯೋಗಾವಕಾಶಗಳ ಸೃಷ್ಟಿ, ಮೂಲಸೌಕರ್ಯಗಳ ಸುಧಾರಣೆ ಹಾಗೂ ಅಭಿವೃದ್ಧಿ ಕಾಮಗಾರಿಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಆದ್ಯತೆ ನೀಡಬೇಕು ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ ಪ್ರಕಾಶ ಮೀನಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಸವನಬಾಗೇವಾಡಿ ತಾಲೂಕಿನ ಬ್ಯಾಕೋಡ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಭೇಟಿ ನೀಡಿ, ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳು ಹಾಗೂ ವಿವಿಧ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲಿಸಿದ ಅವರು, ಕುಡಿಯುವ ನೀರಿನ ಸಮಸ್ಯೆ ಕುರಿತು ಗ್ರಾಮಸ್ಥರೊಂದಿಗೆ ಸಂವಾದ ನಡೆಸಿ ಅಹವಾಲು ಆಲಿಸಿದರು.
ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಸಮಸ್ಯೆ ತಲೆದೋರಿದ ಸಂದರ್ಭ ಉದ್ಭವಿಸಿದರೆ ತಕ್ಷಣಕ್ಕೆ ಸ್ಪಂದಿಸಬೇಕು. ನಿರ್ಲಕ್ಷ್ಯವಹಿಸದೇ ಗಂಭೀರವಾಗಿ ಪರಿಗಣಿಸಿ ಸಮಸ್ಯೆಯಾಗದ ರೀತಿಯ ನಿರ್ವಹಣೆಗೆ ಅಧಿಕಾರಿಗಳಿಗೆ ಸೂಚಿಸಿದರು.
ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಅಗತ್ಯಕ್ಕೆ ಅನುಗುಣವಾಗಿ ಕೊಳವೆಬಾವಿಗಳನ್ನು ಕೊರೆಸಲು ಕ್ರಮ ವಹಿಸಬೇಕು ಎಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಬರಪರಿಸ್ಥಿತಿಯ ಹಿನ್ನೆಲೆಯಲ್ಲಿ ಗ್ರಾಮೀಣ ಕೂಲಿಕಾರ್ಮಿಕರಿಗೆ ಸ್ಥಳೀಯವಾಗಿಯೇ ಉದ್ಯೋಗ ಒದಗಿಸುವ ಉದ್ದೇಶದಿಂದ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲಿ ಅಗತ್ಯ ಕಾಮಗಾರಿಗಳನ್ನು ಗುರುತಿಸಿ ಅನುಷ್ಠಾನಗೊಳಿಸಬೇಕು ಎಂದು ವಡ್ಡರ ತಿಳಿಸಿದರು.
ಈ ಸಂದರ್ಭದಲ್ಲಿ ಬ್ಯಾಕೋಡ ಗ್ರಾಮ ಪಂಚಾಯತಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸುರೇಶ ಲೋಣಿ, ಗ್ರಾಮ ಪಂಚಾಯತಿ ಹಾಗೂ ಅಂಗನವಾಡಿ ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

