ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮಹಾನಗರಪಾಲಿಕೆ ವ್ಯಾಪ್ತಿಯ ಎಲ್ಲ ಅಂಗಡಿಗಳು ಹಾಗೂ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ.೬೦ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಕನ್ನಡ ರಾಜ್ಯೋತ್ಸವದ ಅಂಗವಾಗಿ ಬುಧವಾರ ನಗರದ ಮಹಾತ್ಮ ಗಾಂಧಿ ವೃತ್ತದಿಂದ ಲಿಂಗದಗುಡಿ ರಸ್ತೆಯವರೆಗೆ ಕನ್ನಡ ನಾಮಫಲಕ ಅಳವಡಿಕೆ ಕುರಿತು ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಯಿತು.
ಜಿಲ್ಲಾಧಿಕಾರಿಗಳು ಅಭಿಯಾನಕ್ಕೆ ಚಾಲನೆ ನೀಡಿ, ಎಲ್ಲ ವರ್ತಕರು ನಿಯಮಾನುಸಾರ ಕನ್ನಡ ನಾಮಫಲಕ ಅಳವಡಿಸುವ ಮೂಲಕ ಕನ್ನಡ ಭಾಷೆಗೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಅಧಿನಿಯಮ-೨೦೨೪ರ ಅನ್ವಯ, ಫೆ. ೨೬, ೨೦೨೪ರಿಂದ ಜಾರಿಗೆ ಬಂದಿರುವ ನಿಯಮದಂತೆ, ವಾಣಿಜ್ಯ, ಕೈಗಾರಿಕೆ ಹಾಗೂ ಇತರೆ ವ್ಯವಹಾರಿಕ ಉದ್ದಿಮೆಗಳು ತಮ್ಮ ನಾಮಫಲಕಗಳಲ್ಲಿ ಶೇ.೬೦ರಷ್ಟು ಕನ್ನಡ ಭಾಷೆಯನ್ನು ಪ್ರದರ್ಶಿಸುವುದು ಕಡ್ಡಾಯವಾಗಿದೆ.
ಟ್ರಸ್ಟ್ಗಳು, ಸಮಾವೇಶ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನರಂಜನಾ ಕೇಂದ್ರಗಳು ಹಾಗೂ ಹೋಟೆಲ್‌ಗಳಿಗೂ ಈ ನಿಯಮ ಅನ್ವಯಿಸುತ್ತದೆ. ಜಾಗೃತಿ ಅಭಿಯಾನದ ವೇಳೆ ನಿಯಮಾನುಸಾರ ಕನ್ನಡ ನಾಮಫಲಕ ಅಳವಡಿಸದ ಉದ್ದಿಮೆದಾರರಿಗೆ ಅಧಿಕಾರಿಗಳು ತಿಳಿವಳಿಕೆ ನೀಡಿದರು. ಶೇ.೬೦ರಷ್ಟು ಕನ್ನಡ ಭಾಷೆಯನ್ನು ಪ್ರದರ್ಶಿಸದ ಅಂಗಡಿಗಳ ನಾಮಫಲಕಗಳನ್ನು ತೆರವುಗೊಳಿಸಿ, ಒಟ್ಟು ಸುಮಾರು ₹೨೦,೦೦೦ ದಂಡ ವಿಧಿಸಲಾಯಿತು. ಅಭಿಯಾನದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳು, ಮಹಾನಗರಪಾಲಿಕೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ, ವಿವಿಧ ಕನ್ನಡಪರ ಸಂಘಟನೆಗಳು ಮತ್ತು ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು ಎಂದು ಮಹಾನಗರಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

