ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಅಭಿಮತ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸತ್ಯ, ಅಹಿಂಸೆ ಮತ್ತು ಮಾನವೀಯ ಮೌಲ್ಯಗಳ ಮೂಲಕ ಜಗತ್ತಿಗೆ ಸಂದೇಶ ಸಾರಿದ ಮಹಾತ್ಮ ಗಾಂಧೀಜಿಯವರ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಗಾಂಧಿ ಅಧ್ಯಯನ ಕೇಂದ್ರ ಹಾಗೂ ಆಗಸ್ಟ್ ಕ್ರಾಂತಿ ಟ್ರಸ್ಟ್ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ‘ಗಾಂಧೀಜಿಯವರ ಚಿಂತನೆಗಳ ಪ್ರಸ್ತುತತೆ’ ಕುರಿತ ವಿಶೇಷ ದತ್ತಿ ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸತ್ಯ ಮತ್ತು ಅಹಿಂಸೆ ಗಾಂಧೀಜಿಯವರ ಪಾಲಿಗೆ ಕೇವಲ ಸಿದ್ಧಾಂತಗಳಾಗಿರಲಿಲ್ಲ. ಅವು ಬದುಕಿನ ಮೌಲ್ಯಗಳಾಗಿದ್ದವು. ಅನ್ಯಾಯ, ಶೋಷಣೆ ಮತ್ತು ಅಸಮಾನತೆಗಳ ವಿರುದ್ಧ ಅಹಿಂಸಾತ್ಮಕ ಹೋರಾಟದ ಮೂಲಕ ಪ್ರತಿರೋಧ ವ್ಯಕ್ತಪಡಿಸಿದ ಅವರು, ಅಧಿಕಾರಕ್ಕಿಂತ ನೈತಿಕತೆ ಹಾಗೂ ಹಿಂಸೆಗಿಂತ ಅಹಿಂಸೆಯೇ ಶ್ರೇಷ್ಠ ಎಂಬುದನ್ನು ತಮ್ಮ ಬದುಕಿನ ಮೂಲಕ ತೋರಿಸಿಕೊಟ್ಟಿದ್ದಾರೆ. ಇಂದಿನ ಯುವಜನತೆ ಗಾಂಧೀಜಿಯವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಚಿಂತಕ ಹಾಗೂ ಸಾಹಿತಿ ಮಂಜುನಾಥ ಜನಗೊಂಡ ಮಾತನಾಡಿ, ಅಹಿಂಸೆ ಎಂದರೆ ಅನ್ಯಾಯವನ್ನು ಸಹಿಸಿಕೊಂಡು ಮೌನವಾಗಿರುವುದಲ್ಲ. ಅನ್ಯಾಯದ ವಿರುದ್ಧ ಧೈರ್ಯದಿಂದ ನಿಲ್ಲುವ ಮನೋಭಾವವೂ ಅಹಿಂಸೆಯ ಭಾಗವಾಗಿದೆ. ಆತ್ಮಗೌರವ, ಮಾನವೀಯತೆ ಮತ್ತು ಸಾಮಾಜಿಕ ಜವಾಬ್ದಾರಿಗಳಿಗೆ ಪ್ರತಿಯೊಬ್ಬರೂ ಆದ್ಯತೆ ನೀಡಬೇಕು ಎಂದರು.
ಕುಲಸಚಿವ ಡಾ. ವಿಜಯಕುಮಾರ ಬಿ. ಅಜೂರ ಮಾತನಾಡಿ, ಆಗಸ್ಟ್ ಕ್ರಾಂತಿಯ ಐತಿಹಾಸಿಕ ಹಿನ್ನೆಲೆ ಹಾಗೂ ಸ್ವಾತಂತ್ರ್ಯ ಹೋರಾಟದಲ್ಲಿ ಅದರ ಮಹತ್ವವನ್ನು ವಿವರಿಸಿದರು.
ಗಾಂಧಿ ಅಧ್ಯಯನ ಕೇಂದ್ರದ ಸಂಯೋಜಕ ಡಾ. ಮಾಲಿ ಪಾಟೀಲ್ ಪ್ರಾಸ್ತಾವಿಕ ನುಡಿಗಳನ್ನಾಡಿ, ಸ್ವಾಗತಿಸಿದರು. ಮೇಘಾ ಪಾಟೀಲ್ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಸಂಗೀತ ವಿಭಾಗದ ವಿದ್ಯಾರ್ಥಿನಿಯರಾದ ಶ್ರುತಿ ಮತ್ತು ವೀಣಾ ತಂಡದವರು ಹಾಡಿದರು. ವರ್ಷಾ ನಡಕಟ್ಟಿ ವಂದಿಸಿದರು. ಲಕ್ಷ್ಮಿ ದೇವಗಿರಿ ನಿರೂಪಿಸಿದರು.

