ಉದಯರಶ್ಮಿ ದಿನಪತ್ರಿಕೆ
ಕೊಲ್ಹಾರ: ಕಬ್ಬಿನ ದರ ನಿಗದಿ ಹೋರಾಟದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಚೂನಪ್ಪ ಪೂಜಾರಿ ಹಾಗೂ ಗೌರವಾಧ್ಯಕ್ಷ ಶಶಿಕಾಂತ ಗುರೂಜಿ ಸೇರಿದಂತೆ ಹಲವು ರೈತರನ್ನು ಪೊಲೀಸರು ವಶಕ್ಕೆ ಪಡೆದಿರುವುದನ್ನು ಖಂಡಿಸಿ ಕೊಲ್ಹಾರ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದ ಯುಕೆಪಿ ಕ್ರಾಸ್ ಸಮೀಪದ ಕೊರಿಮ್ಮಾದೇವಿ ದೇವಸ್ಥಾನದ ಬಳಿ ಗುರುವಾರ ರಾಷ್ಟ್ರೀಯ ಹೆದ್ದಾರಿ-52ರಲ್ಲಿ ಕೆಲಕಾಲ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದರು.
ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸಬೇಕು, ರೈತರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು ಹಾಗೂ ಬಂಧಿಸಿರುವ ರೈತ ಮುಖಂಡರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ರೈತರ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡಬಾರದು. ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಬದಲು ನಾಯಕರನ್ನು ಬಂಧಿಸುವ ಮೂಲಕ ಹೋರಾಟವನ್ನು ಹತ್ತಿಕ್ಕಲು ಮುಂದಾಗಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಂಚಾರ ಅಸ್ತವ್ಯಸ್ತ
ರೈತರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದರಿಂದ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ಹೆದ್ದಾರಿಯ ಎರಡೂ ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದರಿಂದ ಪ್ರಯಾಣಿಕರು ಕೆಲಕಾಲ ಪರದಾಡುವಂತಾಯಿತು.
ಸ್ಥಳಕ್ಕೆ ಆಗಮಿಸಿದ ಕೊಲ್ಹಾರ ಪೊಲೀಸ್ ಠಾಣೆಯ ಪಿಎಸ್ಐ ಅಶೋಕ ನಾಯಕ ಹಾಗೂ ಪೊಲೀಸ್ ಸಿಬ್ಬಂದಿ ಪರಿಸ್ಥಿತಿ ನಿಯಂತ್ರಿಸಿದರು.

