ಅನುದಾನ ಬಿಡುಗಡೆಯಾದರೂ ನಾಲ್ಕು ವರ್ಷಗಳಿಂದ ಡಾಂಬರೀಕರಣ ಕಾಣದ ಹೊನವಾಡ–ಕಾಜಿಬಿಳಗಿ ರಸ್ತೆ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ
ಉದಯರಶ್ಮಿ ದಿನಪತ್ರಿಕೆ
ಹೊನವಾಡ: ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಹೊನವಾಡದಿಂದ ಕಾಜಿಬಿಳಗಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಳೆದ ನಾಲ್ಕು ವರ್ಷಗಳಿಂದ ಡಾಂಬರೀಕರಣ ಕಾಣದೆ ಹದಗೆಟ್ಟಿದ್ದು, ಸಾರ್ವಜನಿಕರು ಪ್ರತಿನಿತ್ಯ ಸಂಚಾರದ ಸಂಕಷ್ಟ ಅನುಭವಿಸುವಂತಾಗಿದೆ.
ರಸ್ತೆ ಅಭಿವೃದ್ಧಿಗಾಗಿ ಅನುದಾನ ಬಿಡುಗಡೆಯಾಗಿದೆ ಎನ್ನಲಾಗುತ್ತಿದ್ದರೂ, ಇಂದಿಗೂ ಕಾಮಗಾರಿ ಪೂರ್ಣಗೊಳ್ಳದೆ ಇರುವುದು ಸಾರ್ವಜನಿಕರಲ್ಲಿ ಹಲವು ಅನುಮಾನಗಳಿಗೆ ಕಾರಣವಾಗಿದೆ. ರಸ್ತೆಯುದ್ದಕ್ಕೂ ಗುಂಡಿಗಳು, ಕಲ್ಲುಮಣ್ಣು ಹಾಗೂ ಧೂಳು ತುಂಬಿಕೊಂಡಿದ್ದು, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ದ್ವಿಚಕ್ರ ವಾಹನ ಸವಾರರು, ರೈತರು ಹಾಗೂ ದಿನನಿತ್ಯ ಪ್ರಯಾಣಿಸುವ ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ಮಳೆ ಬಂದರೆ ರಸ್ತೆಯ ಗುಂಡಿಗಳಲ್ಲಿ ನೀರು ನಿಂತು ಸಂಚಾರಕ್ಕೆ ಅಡಚಣೆಯಾಗುತ್ತದೆ. ಬೇಸಿಗೆಯಲ್ಲಿ ವಾಹನಗಳು ಸಂಚರಿಸಿದಾಗ ಧೂಳಿನ ಮೋಡ ಆವರಿಸಿ ಅಕ್ಕಪಕ್ಕದ ನಿವಾಸಿಗಳು ಹಾಗೂ ಪ್ರಯಾಣಿಕರು ಆರೋಗ್ಯದ ತೊಂದರೆ ಎದುರಿಸುವಂತಾಗಿದೆ. ತುರ್ತು ಸಂದರ್ಭಗಳಲ್ಲಿ ಆಂಬುಲೆನ್ಸ್ ಸೇರಿದಂತೆ ಅಗತ್ಯ ವಾಹನಗಳ ಸಂಚಾರಕ್ಕೂ ಈ ರಸ್ತೆ ಸಮಸ್ಯೆಯಾಗಿ ಪರಿಣಮಿಸಿದೆ.
ನಾಲ್ಕು ವರ್ಷಗಳಿಂದ ರಸ್ತೆ ಅಭಿವೃದ್ಧಿಗಾಗಿ ಕಾಯುತ್ತಿರುವ ಗ್ರಾಮಸ್ಥರ ತಾಳ್ಮೆಯನ್ನು ಪರೀಕ್ಷಿಸದೆ, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ನಡೆಸಿ ಕಾಮಗಾರಿಗೆ ಚಾಲನೆ ನೀಡಬೇಕು. ಬಿಡುಗಡೆಯಾದ ಅನುದಾನದ ಬಳಕೆ ಮತ್ತು ಕಾಮಗಾರಿ ವಿಳಂಬಕ್ಕೆ ಕಾರಣವೇನು ಎಂಬುದನ್ನು ಸಾರ್ವಜನಿಕರಿಗೆ ಸ್ಪಷ್ಟಪಡಿಸಬೇಕು ಎಂಬುದು ಗ್ರಾಮಸ್ಥರ ಆಗ್ರಹವಾಗಿದೆ.
ಜನರ ಪ್ರಶ್ನೆ ಒಂದೇ: ಅನುದಾನ ಬಿಡುಗಡೆಯಾಗಿದ್ದರೂ ರಸ್ತೆ ಡಾಂಬರೀಕರಣಕ್ಕೆ ಇನ್ನೆಷ್ಟು ವರ್ಷ ಕಾಯಬೇಕು? ಎಂಬುದನ್ನು ಕಾಲವೇ ಉತ್ತರಿಸಬೇಕಾಗಿದೆ.
“ಕಳೆದ ನಾಲ್ಕು ವರ್ಷಗಳಿಂದ ಈ ರಸ್ತೆಯ ಸಮಸ್ಯೆ ಮುಂದುವರಿದಿದೆ. ಅನುದಾನ ಬಿಡುಗಡೆಯಾಗಿದೆ ಎಂಬ ಮಾಹಿತಿ ಇದ್ದರೂ ಕಾಮಗಾರಿ ಆರಂಭವಾಗದಿರುವುದು ಬೇಸರದ ಸಂಗತಿ. ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ನಮ್ಮ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ರಸ್ತೆ ಡಾಂಬರೀಕರಣ ಕಾಮಗಾರಿ ಕೈಗೆತ್ತಿಕೊಳ್ಳಬೇಕು” ಎಂದು ಸಾರ್ವಜನಿಕರ ಪರವಾಗಿ ಒತ್ತಾಯಿಸುತ್ತೇನೆ.”
– ಶ್ರೀಶೈಲ. ಎನ್. ಕೋರಬು

