ಇಂಡಿ-ಚಡಚಣ ತಾಲೂಕುಗಳ ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಪರಿಷ್ಕರಣೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಇಂಡಿ ಮತ್ತು ಚಡಚಣ ತಾಲೂಕುಗಳ ಸ್ಥಿರಾಸ್ತಿಗಳ ಪರಿಷ್ಕೃತ ಮಾರುಕಟ್ಟೆ ಮಾರ್ಗಸೂಚಿ ದರಗಳ ಕರಡು ಪಟ್ಟಿಯನ್ನು ಪ್ರಕಟಿಸಲಾಗಿದೆ.
ಕರ್ನಾಟಕ ಮುದ್ರಾಂಕ ಕಾಯ್ದೆಯ ಮಾರುಕಟ್ಟೆ ದರಗಳನ್ನು ಅಂದಾಜು ಮಾಡುವ, ಪ್ರಕಟಿಸುವ ಮತ್ತು ಪರಿಷ್ಕರಿಸುವ ನಿಯಮಗಳು-೨೦೧೩ರ ನಿಯಮ ೬(೧)ರ ಅನ್ವಯ ೨೦೨೬-೨೭ನೇ ಸಾಲಿನ ಸ್ಥಿರಾಸ್ತಿಗಳ ಮಾರುಕಟ್ಟೆ ಮಾರ್ಗಸೂಚಿ ದರಗಳನ್ನು ನಿಗದಿತ ಮಾರ್ಗಸೂಚಿಗಳ ಪ್ರಕಾರ ಪರಿಷ್ಕರಿಸಿ ಕರಡು ಪಟ್ಟಿ ಸಿದ್ಧಪಡಿಸಲಾಗಿದೆ. ಈ ಕರಡು ಪ್ರತಿಯನ್ನು ಸಾರ್ವಜನಿಕರ ಮಾಹಿತಿಗಾಗಿ ಇಂಡಿ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದೆ.
ಪರಿಷ್ಕೃತ ದರಗಳ ಕುರಿತು ಸಾರ್ವಜನಿಕರು ತಮ್ಮ ಸಲಹೆ, ಸೂಚನೆ ಹಾಗೂ ಆಕ್ಷೇಪಣೆಗಳಿದ್ದಲ್ಲಿ ನವೆಂಬರ್ ೯ರಿಂದ ೨೮ರವರೆಗೆ ಇಂಡಿ ಉಪ ನೋಂದಣಾಧಿಕಾರಿಗಳು ಹಾಗೂ ಮಾರುಕಟ್ಟೆ ಮೌಲ್ಯನಿರ್ಣಯ ಉಪಸಮಿತಿಯ ಸದಸ್ಯ ಕಾರ್ಯದರ್ಶಿಗಳಿಗೆ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
