ವಿಜಯಪುರದಲ್ಲಿ ನಡೆದ ವೀರವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅಭಿಮತ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕನ್ನಡ ನಾಡಿನ ಇತಿಹಾಸದಲ್ಲಿ ವೀರವನಿತೆ ಒನಕೆ ಓಬವ್ವ ಅವರ ಧೈರ್ಯ, ಸಾಹಸ, ಸ್ವಾಭಿಮಾನ ಹಾಗೂ ದೇಶಪ್ರೇಮಕ್ಕೆ ವಿಶಿಷ್ಟ ಸ್ಥಾನವಿದೆ. ಅಸಾಧಾರಣ ಸಮಯಪ್ರಜ್ಞೆ ಮತ್ತು ಸಾಹಸದಿಂದ ಚಿತ್ರದುರ್ಗದ ಕೋಟೆಯನ್ನು ರಕ್ಷಿಸಲು ಹೋರಾಡಿದ ಓಬವ್ವ ಅವರ ಜೀವನ ಎಲ್ಲರಿಗೂ ಪ್ರೇರಣಾದಾಯಕವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಹೇಳಿದರು.
ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಲಾದ ವೀರವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನ್ನಡ ನಾಡಿನ ಇತಿಹಾಸದಲ್ಲಿ ಮಹಿಳಾ ಶೌರ್ಯ ಮತ್ತು ಸ್ವಾಭಿಮಾನದ ಪ್ರತೀಕವಾಗಿ ಒನಕೆ ಓಬವ್ವ ಅಜರಾಮರವಾಗಿದ್ದಾರೆ. ನಾಡಿನ ರಕ್ಷಣೆಗೆ ಆದ್ಯತೆ ನೀಡಿದ ಅವರ ಶೌರ್ಯ, ತ್ಯಾಗ ಮತ್ತು ದೇಶಪ್ರೇಮ ಇಂದಿನ ಯುವಜನತೆಗೆ, ವಿಶೇಷವಾಗಿ ಮಹಿಳೆಯರಿಗೆ ಸ್ಫೂರ್ತಿಯಾಗಬೇಕು ಎಂದರು.
ಉಪನ್ಯಾಸ ನೀಡಿದ, ಚಿತ್ರದುರ್ಗದ ಶ್ರೀಮತಿ ಯಶೋಧರಮ್ಮ ಬೋರಪ್ಪ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಸಂಜೀವಕುಮಾರ ಪೋತೆ, ತಮ್ಮ ಸಮಯಪ್ರಜ್ಞೆ, ಸಾಹಸ ಮತ್ತು ಸ್ವಾಭಿಮಾನದಿಂದ ಕೋಟೆಯ ರಕ್ಷಣೆಗೆ ನಿಂತ ಓಬವ್ವ ಅವರ ವೀರಗಾಥೆ ಕರ್ನಾಟಕದ ಇತಿಹಾಸದಲ್ಲಿ ಅಚ್ಚಳಿಯದೆ ಉಳಿದಿದೆ ಎಂದು ವಿಸ್ಕೃತವಾಗಿ ವಿವರಿಸಿದರು.
ಜಿಲ್ಲಾ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಸಂತ ಹೊನಮೊಡೆ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪೋತದಾರ, ಜಿಲ್ಲಾ ಪಂಚಾಯತಿಯ ಯೋಜನಾಧಿಕಾರಿ ಅಶೋಕ ಕಲಘಟಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ದೈವಾಡಿ, ರಾಜಶೇಖರ ಕುದರಿ, ಚೆನ್ನು ಕಟ್ಟಿಮನಿ, ಅಡಿವೆಪ್ಪ ಸಾಲಗಲ, ಶೇಖ್ ಮಾಸ್ತರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿ,ಸಿಬ್ಬಂದಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಮೋಹನ್ ಕಟ್ಟಿಮನಿ ನಿರೂಪಿಸಿ ವಂದಿಸಿದರು.
ಕಾರ್ಯಕ್ರಮದಲ್ಲಿ ರಂಗನಾಥ ಬತ್ತಾಸೆ ಹಾಗೂ ತಂಡ ನಡೆಸಿಕೊಟ್ಟ ವೀರ ವನಿತೆ ಒನಕೆ ಓಬವ್ವ ಅವರ ಸಾಹಸಗಾಥೆಯನ್ನು ಬಿಂಬಿಸುವ ನೃತ್ಯ ಪ್ರದರ್ಶನ ನೋಡುಗರ ಹೃನ್ಮನ ಸೆಳೆಯಿತು.

