ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಯುವಜನರಲ್ಲಿ ಸಮಾಜಮುಖಿ ಚಿಂತನೆ ಬೆಳೆಸುವುದರೊಂದಿಗೆ ಅವರಲ್ಲಿರುವ ಪ್ರತಿಭೆ, ಸೃಜನಶೀಲತೆ ಮತ್ತು ಕಲಾಸಕ್ತಿಯನ್ನು ಪ್ರೋತ್ಸಾಹಿಸುವುದು ಇಂದಿನ ಅಗತ್ಯವಾಗಿದೆ. ಯುವಶಕ್ತಿಯನ್ನು ಸಕಾರಾತ್ಮಕ ಚಟುವಟಿಕೆಗಳತ್ತ ಪ್ರೇರೇಪಿಸುವ ಮೂಲಕ ಸಮಾಜದ ಅಭಿವೃದ್ಧಿಯಲ್ಲಿ ಯುವಜನರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ ಹೇಳಿದರು.
ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಗುರುವಾರ ನಡೆದ ಯುವಜನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಯುವಜನರಲ್ಲಿ ಅಡಗಿರುವ ಪ್ರತಿಭೆ, ಸೃಜನಶೀಲತೆ ಹಾಗೂ ಕಲಾಸಕ್ತಿಗೆ ಸೂಕ್ತ ವೇದಿಕೆ ಕಲ್ಪಿಸುವುದು ಯುವಜನೋತ್ಸವದ ಮುಖ್ಯ ಉದ್ದೇಶವಾಗಿದೆ. ಇಂತಹ ಕಾರ್ಯಕ್ರಮಗಳು ಯುವಕರಲ್ಲಿ ಆತ್ಮವಿಶ್ವಾಸ ಹೆಚ್ಚಿಸುವುದರ ಜೊತೆಗೆ ಕಲೆ, ಸಂಸ್ಕೃತಿ ಮತ್ತು ಸಾಮಾಜಿಕ ಜವಾಬ್ದಾರಿಯ ಅರಿವು ಮೂಡಿಸುತ್ತವೆ ಎಂದು ತಿಳಿಸಿದರು.
ಯುವ ಪ್ರಶಸ್ತಿ ಪುರಸ್ಕೃತ ಜಾವೇದ ಜಮಾದಾರ ಅವರು ಮಾತನಾಡಿ, ಯುವಜನತೆ ದೇಶದ ಭವಿಷ್ಯದ ಶಕ್ತಿಯಾಗಿದ್ದು, ತಮ್ಮಲ್ಲಿರುವ ಪ್ರತಿಭೆ ಮತ್ತು ಸಾಮರ್ಥ್ಯವನ್ನು ಸಮಾಜದ ಅಭಿವೃದ್ಧಿಗೆ ಬಳಸಿಕೊಳ್ಳಬೇಕು. ಶಿಕ್ಷಣದ ಜೊತೆಗೆ ಕಲೆ, ಸಾಹಿತ್ಯ, ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು. ಉತ್ತಮ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಬೇಕು ಎಂದು ಕರೆ ನೀಡಿದರು.
ಯುವಜನೋತ್ಸವದ ಅಂಗವಾಗಿ ಜನಪದ ನೃತ್ಯ, ಜನಪದ ಗೀತೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ನಡೆದವು. ಸ್ಪರ್ಧೆಗಳಲ್ಲಿ ವಿಜೇತರಾದವರು ಮುಂದಿನ ಹಂತದ ರಾಜ್ಯಮಟ್ಟ ಹಾಗೂ ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಲು ಅವಕಾಶ ಪಡೆಯಲಿದ್ದಾರೆ. ಕ್ರೀಡಾಧಿಕಾರಿ ರಾಜಶೇಖರ ಧೈವಾಡಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಅಡಿವೆಪ್ಪ ಸಾಲಗಲ್, ನಾಗರಾಜ ಲಂಬು ಹಾಗೂ ಸಂಜೀವ ಖೋತ್,ಬಾಬಾಸಾಹೇಬ ವಿಯಧರ್, ಉಪನ್ಯಾಸಕರಾದ ಹರೀಶ್, ಹಿರೇಮಠ, ಕಾಲೇಜಿನ ಪ್ರಾಚಾರ್ಯರು, ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

