ರೈತರ ಹೋರಾಟದ ಸ್ಥಳಕ್ಕೆ ತಹಶೀಲ್ದಾರ್ ಭೇಟಿ | ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರುವುದಾಗಿ ಭರವಸೆ
ಉದಯರಶ್ಮಿ ದಿನಪತ್ರಿಕೆ
ಯಡ್ರಾಮಿ: ಕಬ್ಬಿಗೆ ಪ್ರತಿ ಟನ್‌ಗೆ ₹3,600 ಬೆಲೆ ನಿಗದಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಬ್ಬು ಬೆಳೆಗಾರರು ಹಾಗೂ ವಿವಿಧ ರೈತ ಮತ್ತು ಕನ್ನಡಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ತಾಲೂಕಿನ ಮಳ್ಳಿ- ನಾಗರಹಳ್ಳಿ ಗ್ರಾಮದ ದಿ. ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ ಕಾರ್ಖಾನೆ ಎದುರು ಆರಂಭಿಸಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಎರಡನೇ ದಿನಕ್ಕೆ ಕಾಲಿಟ್ಟಿದೆ.
ಧರಣಿ ಸ್ಥಳಕ್ಕೆ ತಾಲೂಕ ದಂಡಾಧಿಕಾರಿ ಯಲ್ಲಪ್ಪ ಸುಬೇದಾರ್ ಭೇಟಿ ನೀಡಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ, ರೈತರ ಬೇಡಿಕೆಗಳನ್ನು ಆಲಿಸಿದರು. ರೈತರ ಸಮಸ್ಯೆಗಳು ಹಾಗೂ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗುವುದು ಎಂದು ಭರವಸೆ ನೀಡಿದರು.
ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ), ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಚುನ್ನಪ್ಪ ಪೂಜಾರಿ ಮತ್ತು ಕೋಡಿಹಳ್ಳಿ ಚಂದ್ರಶೇಖರ್ ಬಣ), ಭಾರತೀಯ ಕೃಷಿಕ ಸಮಾಜ (ನವದೆಹಲಿ) ಸೇರಿದಂತೆ ವಿವಿಧ ದಲಿತ, ಕನ್ನಡಪರ ಹಾಗೂ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ. ಕಲಬುರಗಿ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳ ನೂರಾರು ರೈತರು ಹೋರಾಟದಲ್ಲಿ ಭಾಗವಹಿಸಿದ್ದಾರೆ.
ಪ್ರತಿಭಟನಾಕಾರರ ಪ್ರಮುಖ ಬೇಡಿಕೆಗಳು:
- ಬೆಳಗಾವಿ ಮಾದರಿಯಲ್ಲಿ ಪ್ರತಿ ಟನ್ ಕಬ್ಬಿಗೆ ₹3,600 ದರ ನಿಗದಿಪಡಿಸಬೇಕು.
- ಕಬ್ಬು ಕಟಾವಿಗೆ ನಿಗದಿಪಡಿಸಿದ ದಿನಾಂಕದಿಂದ 15 ದಿನಗಳೊಳಗೆ ಕಟಾವು ಪೂರ್ಣಗೊಳಿಸಬೇಕು.
- ಕಟಾವಾದ 15 ದಿನಗಳೊಳಗೆ ರೈತರ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡಬೇಕು.
- ಪ್ರತಿ ಟನ್ ಕಬ್ಬಿಗೆ 500 ಗ್ರಾಂ ಉತ್ತಮ ಗುಣಮಟ್ಟದ ಸಕ್ಕರೆಯನ್ನು ಉಚಿತವಾಗಿ ನೀಡಬೇಕು.
- ಕಾರ್ಖಾನೆಯಿಂದ ಹೊರಸೂಸುವ ಹೊಗೆ ಹಾಗೂ ಕಲುಷಿತ ನೀರಿನಿಂದ ಉಂಟಾಗುವ ಪರಿಸರ ಹಾನಿಗೆ ಸೂಕ್ತ ಪರಿಹಾರ ನೀಡಬೇಕು.
- ಕಾರ್ಖಾನೆ ಆವರಣದಲ್ಲಿ ರೈತರ ಅನುಕೂಲಕ್ಕಾಗಿ ರೈತ ಭವನ ನಿರ್ಮಿಸಬೇಕು.
- ಕಬ್ಬು ಸಾಗಣೆ ಮಾಡುವ ಚಾಲಕರು ಹಾಗೂ ಕಾರ್ಮಿಕರಿಗೆ ರಿಯಾಯಿತಿ ದರದಲ್ಲಿ ಊಟ ಒದಗಿಸಲು ಕ್ಯಾಂಟೀನ್ ವ್ಯವಸ್ಥೆ ಕಲ್ಪಿಸಬೇಕು.
- ಶುದ್ಧ ಕುಡಿಯುವ ನೀರು, ಸ್ನಾನಗೃಹ ಹಾಗೂ ಶೌಚಾಲಯ ಸೇರಿದಂತೆ ಅಗತ್ಯ ಮೂಲಸೌಕರ್ಯ ಒದಗಿಸಬೇಕು.

