ವಿಜಯಪುರದಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಧು ಬಂಗಾರಪ್ಪ ಹೇಳಿಕೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮಕ್ಕಳಲ್ಲಿರುವ ಪ್ರತಿಭೆ ಮತ್ತು ಜ್ಞಾನವನ್ನು ಗುರುತಿಸಿ, ಅದನ್ನು ಅನಾವರಣಗೊಳಿಸಲು ಗುಣಮಟ್ಟದ ಶಿಕ್ಷಣದ ಜೊತೆಗೆ ಆಧುನಿಕ ತಂತ್ರಜ್ಞಾನದ ಕಲಿಕೆಗೆ ಆದ್ಯತೆ ನೀಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.
ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಗರದ ಗಾಂಧಿ ಚೌಕಿನ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಕ್ಕಳ ಭವಿಷ್ಯ ರೂಪಿಸುವಲ್ಲಿ ನಮ್ಮ ಸರ್ಕಾರ ಬದ್ಧವಾಗಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್‌ಕೆಜಿಯಿಂದ ೧೨ನೇ ತರಗತಿಯವರೆಗೆ ಒಂದೇ ಸೂರಿನಡಿ ಶಿಕ್ಷಣ ಪಡೆಯುವ ವ್ಯವಸ್ಥೆ ಜಾರಿಗೆ ತರಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಅಗತ್ಯ ಸಾರಿಗೆ ವ್ಯವಸ್ಥೆಯನ್ನೂ ಕಲ್ಪಿಸಲಾಗುವುದು. ಕಂಪ್ಯೂಟರ್‌ನಿಂದ ಕೃತಕ ಬುದ್ಧಿಮತ್ತೆಯವರೆಗೆ ಮಕ್ಕಳಿಗೆ ತಂತ್ರಜ್ಞಾನ ಆಧಾರಿತ ಶಿಕ್ಷಣ ನೀಡುವ ಮೂಲಕ ಅವರಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರತರಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಮೆಗಾ ಪೋಷಕರ-ಶಿಕ್ಷಕರ ಸಭೆಯ ಮೂಲಕ ರಾಜ್ಯದ ೪೨ ಸಾವಿರ ಶಾಲೆಗಳನ್ನು ಆನ್‌ಲೈನ್ ವ್ಯವಸ್ಥೆಗೆ ಒಳಪಡಿಸಲಾಗಿದೆ. ಪೋಷಕರ ಸಭೆಗಳನ್ನು ನಡೆಸುವ ಮೂಲಕ ಶಾಲೆಗಳ ಶೈಕ್ಷಣಿಕ ಗುಣಮಟ್ಟ ಸುಧಾರಿಸಲು ಕ್ರಮ ವಹಿಸಲಾಗಿದೆ. ಬೆಳಗಾವಿ ವಿಭಾಗವು ಶೈಕ್ಷಣಿಕ ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡುತ್ತಿದೆ. ಶಿಕ್ಷಣ ಇಲಾಖೆಯಲ್ಲಿ ಹೆಚ್ಚಿನ ಸಂಖ್ಯೆಯ ಸರ್ಕಾರಿ ನೌಕರರು ಕಾರ್ಯನಿರ್ವಹಿಸುತ್ತಿದ್ದು, ಶಿಕ್ಷಣ ಕ್ಷೇತ್ರದ ಮಹತ್ವವನ್ನು ಇದು ತೋರಿಸುತ್ತದೆ. ಸಚಿವ ಎಂ.ಬಿ. ಪಾಟೀಲರು ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ನಿರಂತರ ಮಾರ್ಗದರ್ಶನ ನೀಡುತ್ತಿದ್ದಾರೆ ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ಬಂಗಾರಪ್ಪ ಅವರು ಜಾರಿಗೆ ತಂದ ಗ್ರಾಮೀಣ ಕೃಪಾಂಕ ಯೋಜನೆಯಿಂದ ಅನೇಕ ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ದೊರೆತಿದೆ ಎಂದು ಸ್ಮರಿಸಿದ ಅವರು, ಮಕ್ಕಳ ಸೇವೆ ಮಾಡುವುದು ದೇವರ ಸೇವೆ ಮಾಡಿದಂತೆ ಎಂದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಡಾ. ಎಂ.ಬಿ. ಪಾಟೀಲ, ಸರ್ಕಾರಿ ಶಾಲೆಗಳಲ್ಲಿ ಕಲಿಯುವ ಮಕ್ಕಳ ಪ್ರಾಥಮಿಕ ಶಿಕ್ಷಣ ಅತ್ಯಂತ ಮಹತ್ವದ್ದಾಗಿದೆ. ಗ್ರಾಮೀಣ ಹಾಗೂ ಸಾಮಾನ್ಯ ಕುಟುಂಬಗಳ ಮಕ್ಕಳಿಗೂ ಸೂಕ್ತ ಅವಕಾಶಗಳು ದೊರೆತರೆ ಅವರಲ್ಲಿರುವ ಜ್ಞಾನ ಮತ್ತು ಪ್ರತಿಭೆ ಬೆಳಕಿಗೆ ಬರಲು ಸಾಧ್ಯ. ಈ ನಿಟ್ಟಿನಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಮಕ್ಕಳಿಂದಲೇ ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಸಕ ವಿಠ್ಠಲ ಕಟಕಧೊಂಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಂಗಾಧರ ಸಂಬಣ್ಣಿ, ಜಿಲ್ಲಾಧಿಕಾರಿ ಡಾ. ಆನಂದ್.ಕೆ, ಶಿಕ್ಷಣ ಇಲಾಖೆಯ ಅಪರ ಆಯುಕ್ತ ಈಶ್ವರ ಉಳ್ಳಾಗಡ್ಡಿ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ.ಎ. ಉಪ್ಪಾರ, ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕ ಮಂಜುನಾಥ ಗುಳೇದಗುಡ್ಡ, ವಿಜಯಪುರ ನಗರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ರಾಘವೇಂದ್ರ ಹೊಸೂರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

