ತಿಕೋಟಾದಲ್ಲಿ ರಾಜ್ಯಮಟ್ಟದ ಮಕ್ಕಳ ವಿಜ್ಞಾನಜಾತ್ರೆಗೆ ಚಾಲನೆ ನೀಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಗ್ರಾಮೀಣ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವುದರೊಂದಿಗೆ ವಿಜ್ಞಾನದ ವಿವಿಧ ಪರಿಕಲ್ಪನೆಗಳನ್ನು ಪ್ರಾಯೋಗಿಕವಾಗಿ ಅರಿತುಕೊಳ್ಳಲು ವಿಜ್ಞಾನಜಾತ್ರೆಗಳು ಉತ್ತಮ ವೇದಿಕೆಯಾಗಿವೆ. ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ಸಂಶೋಧನಾ ಪ್ರವೃತ್ತಿ, ಸೃಜನಶೀಲತೆ ಹಾಗೂ ವೈಜ್ಞಾನಿಕ ಚಿಂತನೆ ಬೆಳೆಸಲು ಸಹಕಾರಿಯಾಗುತ್ತವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಶನಿವಾರ ಮಕ್ಕಳ ದಿನಾಚರಣೆ ಅಂಗವಾಗಿ ತಿಕೋಟಾದ ಎ.ಬಿ. ಜತ್ತಿ ಶಾಲೆ ಆವರಣದಲ್ಲಿ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಬಿ.ಎಲ್.ಡಿ.ಇ ಸಂಸ್ಥೆ ಹಾಗೂ ಅಗಸ್ತ್ಯ ಫೌಂಡೇಶನ್ ಸಹಯೋಗದಲ್ಲಿ ಆಯೋಜಿಸಿದ್ದ ಮಕ್ಕಳ ವಿಜ್ಞಾನಜಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಸುಮಾರು ೪,೫೦೦ ಕೋಟಿ ರೂ. ವೆಚ್ಚದಲ್ಲಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಿದೆ. ಎಲ್‌ಕೆಜಿಯಿಂದ ಪಿಯುಸಿವರೆಗೆ ೧೪ ವರ್ಷಗಳ ಶಿಕ್ಷಣವನ್ನು ಒಂದೇ ಸೂರಿನಡಿ ಒದಗಿಸುವುದರ ಜತೆಗೆ ಉಚಿತ ಬಸ್ ಸೌಲಭ್ಯ ಕಲ್ಪಿಸಲಾಗುವುದು. ಮುಂದಿನ ಒಂದೆರಡು ತಿಂಗಳಲ್ಲಿ ಶಾಲೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಗುವುದು ಎಂದು ತಿಳಿಸಿದರು.
ಸರ್ಕಾರಿ ಶಾಲೆಗಳ ಮಕ್ಕಳ ಪೌಷ್ಟಿಕತೆಗೂ ಸರ್ಕಾರ ಆದ್ಯತೆ ನೀಡಿದೆ. ರಾಜ್ಯದ ಸುಮಾರು ೪೫ ಲಕ್ಷ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜತೆಗೆ ಮೊಟ್ಟೆ ಹಾಗೂ ಮೊಟ್ಟೆ ಸೇವಿಸದ ಮಕ್ಕಳಿಗೆ ಬಾಳೆಹಣ್ಣು ವಿತರಿಸಲಾಗುತ್ತಿದೆ. ೧,೯೯೧ ಕೋಟಿ ರೂ. ವೆಚ್ಚದ ಈ ಕಾರ್ಯಕ್ರಮಕ್ಕೆ ಅಜೀಂ ಪ್ರೇಮ್‌ಜಿ ಫೌಂಡೇಶನ್ ಸಹಕಾರ ನೀಡುತ್ತಿರುವುದು ಶ್ಲಾಘನೀಯ ಎಂದರು.
ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಕಂಪ್ಯೂಟರ್ ಶಿಕ್ಷಣ, ಸುಸಜ್ಜಿತ ವಿಜ್ಞಾನ ಪ್ರಯೋಗಾಲಯ, ಮೂರನೇ ತರಗತಿಯಿಂದ ಕೃತಕ ಬುದ್ಧಿಮತ್ತೆ ಪರಿಚಯ ಹಾಗೂ ಆರನೇ ತರಗತಿಯಿಂದ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಯೋಜಿಸಲಾಗಿದೆ. ಆಧುನಿಕ ತಂತ್ರಜ್ಞಾನದ ಜ್ಞಾನವನ್ನು ಬಾಲ್ಯದಿಂದಲೇ ಮಕ್ಕಳಿಗೆ ಪರಿಚಯಿಸುವ ಮೂಲಕ ಭವಿಷ್ಯದ ಸವಾಲುಗಳನ್ನು ಎದುರಿಸಲು ಸಜ್ಜುಗೊಳಿಸಲಾಗುವುದು ಎಂದು ಹೇಳಿದರು.
ಸರ್ಕಾರಿ ಶಾಲೆಗಳಲ್ಲಿ ಅರ್ಹ ಹಾಗೂ ಅನುಭವಿ ಶಿಕ್ಷಕರಿದ್ದು, ಮಕ್ಕಳ ಭವಿಷ್ಯ ರೂಪಿಸಲು ಶ್ರಮಿಸುತ್ತಿದ್ದಾರೆ. ವಿದ್ಯಾರ್ಥಿಗಳು ಶಾಲೆಯಲ್ಲಿ ದೊರೆಯುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಶ್ರದ್ಧೆಯಿಂದ ಅಭ್ಯಾಸ ಮಾಡಬೇಕು. ಪೋಷಕರನ್ನು ಗೌರವಿಸುವುದರ ಜತೆಗೆ ಜೀವನದ ಸವಾಲುಗಳನ್ನು ಧೈರ್ಯದಿಂದ ಎದುರಿಸಿ ಉನ್ನತ ಗುರಿ ಸಾಧಿಸಬೇಕು ಎಂದು ಸಲಹೆ ನೀಡಿದರು.
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಮಕ್ಕಳ ಕಲಿಕೆ ಮತ್ತು ಪ್ರತಿಭೆ ಅನಾವರಣಕ್ಕೆ ಪೂರಕವಾದ ವಿಜ್ಞಾನಜಾತ್ರೆಗಳನ್ನು ಆಯೋಜಿಸಬೇಕು. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಖಾಸಗಿ ಕಂಪನಿಗಳು ಹಾಗೂ ಕೈಗಾರಿಕೋದ್ಯಮಿಗಳು ತಮ್ಮ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ಸಹಕಾರ ನೀಡಬೇಕು ಎಂದು ಕರೆ ನೀಡಿದರು.
ನಾಗನೂರು ರುದ್ರಾಕ್ಷಿ ಮಠದ ಅಲ್ಲಮಪ್ರಭು ಮಹಾಸ್ವಾಮೀಜಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ನಾಗಠಾಣ ಶಾಸಕ ವಿಠ್ಠಲ ಕಟಕಧೊಂಡ, ಶಾಲಾ ಶಿಕ್ಷಣ ಇಲಾಖೆಯ ಧಾರವಾಡದ ಅಪರ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಜಿಲ್ಲಾಧಿಕಾರಿ ಡಾ. ಆನಂದ ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಮಂಜುನಾಥ ಗುಳೇದಗುಡ್ಡ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಮುಜಾವರ್, ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ತಳವಾರ, ಎ.ಬಿ. ಜತ್ತಿ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು, ವಿಜ್ಞಾನಾಸಕ್ತರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಬಬಲೇಶ್ವರ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ
ಈ ಸಂದರ್ಭದಲ್ಲಿ ಮಾತನಾಡಿದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಅವರು, ಬಡ ರೈತರು ಹಾಗೂ ಕೂಲಿ ಕಾರ್ಮಿಕರ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ಬಬಲೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದರು.
ಶಾಲೆಗಳ ಅಭಿವೃದ್ಧಿಗೆ ಖಾಸಗಿ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆ ನಿಧಿ ಹಾಗೂ ದಾನಿಗಳ ಸಹಕಾರ ಪಡೆಯಲಾಗುತ್ತಿದೆ. ಅಂಗನವಾಡಿ ಕೇಂದ್ರಗಳಿಗೂ ಆಟಿಕೆ ಮತ್ತು ಆಟದ ಉಪಕರಣಗಳನ್ನು ಒದಗಿಸಿ, ಮಕ್ಕಳ ಕಲಿಕೆ ಹಾಗೂ ಬೆಳವಣಿಗೆಗೆ ಪೂರಕ ವಾತಾವರಣ ನಿರ್ಮಿಸಲಾಗುತ್ತಿದೆ. ಈ ಮೂಲಕ ಬಾಲ್ಯದಿಂದಲೇ ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಬೆಳೆಸಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದರು.
ಗ್ರಾಮೀಣ ಮಕ್ಕಳಲ್ಲಿ ಅಪಾರ ಪ್ರತಿಭೆಯಿದ್ದು, ಸೂಕ್ತ ಅವಕಾಶ ಮತ್ತು ಪ್ರೋತ್ಸಾಹ ದೊರೆತರೆ ಅವರು ಉನ್ನತ ಹುದ್ದೆಗಳನ್ನು ಅಲಂಕರಿಸಲು ಸಾಧ್ಯವಿದೆ. ಶಿಕ್ಷಣದ ಜತೆಗೆ ಕ್ರೀಡೆ, ಸಂಗೀತ, ನೃತ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಆಸಕ್ತಿ ಬೆಳೆಸಿಕೊಳ್ಳಲು ಮಕ್ಕಳಿಗೆ ಅವಕಾಶ ಕಲ್ಪಿಸಬೇಕು. ಸರ್ಕಾರಿ ಶಾಲೆಗಳನ್ನು ಅತ್ಯುತ್ತಮ ಕಲಿಕಾ ಕೇಂದ್ರಗಳನ್ನಾಗಿ ರೂಪಿಸುವ ಕಾರ್ಯಕ್ಕೆ ಎಲ್ಲರೂ ಒಗ್ಗಟ್ಟಿನಿಂದ ಕೈಜೋಡಿಸಬೇಕು. ಪೋಷಕರು ಮಕ್ಕಳನ್ನು ತಪ್ಪದೆ ಶಾಲೆಗೆ ಕಳುಹಿಸುವುದರ ಜತೆಗೆ ಅವರ ಶಿಕ್ಷಣಕ್ಕೆ ನಿರಂತರ ಪ್ರೋತ್ಸಾಹ ನೀಡಬೇಕು ಎಂದು ಸಚಿವ ಡಾ. ಎಂ.ಬಿ.ಪಾಟೀಲ ಹೇಳಿದರು.
