ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸರಕಾರಿ ಶಾಲೆಗಳಲ್ಲಿ ತಂತ್ರಜ್ಞಾನ ಆಧಾರಿತ ಗುಣಮಟ್ಟದ ಶಿಕ್ಷಣವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಹತ್ವದ ಕೊಡುಗೆ ನೀಡಿರುವ ಎಂ.ವೀ. ಫೌಂಡೇಶನ್ಗೆ, ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ವಿಜ್ಞಾನ ಜಾತ್ರೆಯಲ್ಲಿ, ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ನೀಡಿದ ಗಣನೀಯ ಕೊಡುಗೆಯನ್ನು ಗುರುತಿಸಿ ಅಧಿಕೃತವಾಗಿ ಗೌರವಿಸಿ ಸನ್ಮಾನಿಸಲಾಯಿತು.
ಶನಿವಾರ ತಿಕೋಟಾದಲ್ಲಿ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಡಾ. ಎಂ. ಬಿ. ಪಾಟೀಲ್ ಹಾಗೂ ಶಾಲಾ ಶಿಕ್ಷಣ ಸಚಿವರಾದ ಶ್ರೀ ಮಧು ಬಂಗಾರಪ್ಪ ಅವರು ಉಪಸ್ಥಿತರಿದ್ದರು. ಶಿಕ್ಷಣ ಇಲಾಖೆಯ ಅಧಿಕಾರಿಗಳು, ಗಣ್ಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಎಂ.ವೀ. ಫೌಂಡೇಶನ್ನ ಸಿಎಸ್ಆರ್ ಮುಖ್ಯಸ್ಥರಾದ ಶ್ರೀ ವಿನಯಕುಮಾರ್ ಬಿ. ಜಿ. ಅವರು ಸಂಸ್ಥೆಯ ಪರವಾಗಿ ಭಾಗವಹಿಸಿ ಗೌರವ ಸನ್ಮಾನವನ್ನು ಸ್ವೀಕರಿಸಿದರು.
ಗುಣಮಟ್ಟದ ಹಾಗೂ ಎಲ್ಲರನ್ನೂ ಒಳಗೊಂಡ ಶಿಕ್ಷಣಕ್ಕೆ ಆದ್ಯತೆ ನೀಡುವ ಉದ್ದೇಶದಿಂದ ಎಂ.ವೀ. ಗ್ರೂಪ್ ತನ್ನ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿಯ ಮೂಲಕ ವಿಜಯಪುರ ಜಿಲ್ಲೆಯ ತಿಕೋಟಾ ಮತ್ತು ಬಬಲೇಶ್ವರ ಪ್ರದೇಶಗಳಲ್ಲಿನ 60 ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಒಟ್ಟು 147 ಸ್ಮಾರ್ಟ್ ತರಗತಿಗಳನ್ನು ಸ್ಥಾಪಿಸಿದೆ. ಈ ಯೋಜನೆಯನ್ನು ಎಂ.ವೀ. ಗ್ರೂಪ್ನ ಸಮಾಜಮುಖಿ ಅಂಗಸಂಸ್ಥೆಯಾದ ಎಂ.ವೀ. ಫೌಂಡೇಶನ್ ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಯೋಜನೆಯಿಂದ 16,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಂತ್ರಜ್ಞಾನ ಆಧಾರಿತ, ಸಂವಾದಾತ್ಮಕ ಹಾಗೂ ಆಸಕ್ತಿದಾಯಕ ಕಲಿಕಾ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ. ವಿದ್ಯಾರ್ಥಿಗಳ ಕುಟುಂಬಗಳು ಹಾಗೂ ಸುತ್ತಮುತ್ತಲಿನ ಸ್ಥಳೀಯ ಸಮುದಾಯಗಳನ್ನು ಒಳಗೊಂಡಂತೆ ಈ ಯೋಜನೆಯ ಸಾಮಾಜಿಕ ಪ್ರಭಾವವು 2 ಲಕ್ಷಕ್ಕೂ ಅಧಿಕ ಜನರನ್ನು ತಲುಪುತ್ತಿದೆ.
ಈ ಸಂದರ್ಭದಲ್ಲಿ ಗೌರವಾನ್ವಿತ ಕೈಗಾರಿಕಾ ಸಚಿವರಾದ ಡಾ. ಎಂ. ಬಿ. ಪಾಟೀಲ್ ಹಾಗೂ ಶಾಲಾ ಶಿಕ್ಷಣ ಸಚಿವರಾದ ಶ್ರೀ ಮಧು ಬಂಗಾರಪ್ಪ ಅವರು, ಸರ್ಕಾರಿ ಶಾಲೆಗಳಲ್ಲಿ ಆಧುನಿಕ ತಂತ್ರಜ್ಞಾನ ಆಧಾರಿತ ಕಲಿಕಾ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಎಂ.ವೀ. ಫೌಂಡೇಶನ್ ನೀಡಿರುವ ಕೊಡುಗೆ ಹಾಗೂ ಸಾಮಾಜಿಕ ಬದ್ಧತೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಮಾನ ಕಲಿಕಾ ಅವಕಾಶಗಳನ್ನು ಕಲ್ಪಿಸುವ ಈ ಪ್ರಯತ್ನವನ್ನು ಮೆಚ್ಚುಗೆ ವ್ಯಕ್ತಪಡಿಸಿದರು.

