ಉದಯರಶ್ಮಿ ದಿನಪತ್ರಿಕೆ
ಚಡಚಣ: ತಿಂಗಳುಗಟ್ಟಲೆ ಜೆಡಿಎಸ್ ಮುಖಂಡ ಬಿ.ಡಿ. ಪಾಟೀಲ, ರೈತ ಸಂಘಟನೆಗಳು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಕಬ್ಬಿನ ದರ ನಿಗದಿಪಡಿಸುವಂತೆ ನಡೆಸಿದ ಹೋರಾಟಕ್ಕೆ ಫಲ ಸಿಕ್ಕಿದೆ. ಭೀಮಾಶಂಕರ ಸಕ್ಕರೆ ಕಾರ್ಖಾನೆ (ಮರಗೂರ) ಅಧ್ಯಕ್ಷ ಹಾಗೂ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಪ್ರತಿ ಟನ್ ಕಬ್ಬಿಗೆ ₹3,500+₹200=₹3,700 ದರ ನಿಗದಿಪಡಿಸಿರುವುದು ಶೇರುದಾರ ರೈತರಲ್ಲಿ ಸಂತಸ ಮೂಡಿಸಿದೆ ಎಂದು ಝಳಕಿಯ ಯುವ ಮುಖಂಡ ಸುಭಾಷ್ ಚಟ್ಟರಕಿ ಹೇಳಿದರು.
ಕಬ್ಬು ಬೆಳೆಗಾರರ ನಿರಂತರ ಹೋರಾಟ, ರೈತ ಸಂಘಟನೆಗಳ ಒತ್ತಡ ಹಾಗೂ ವಿವಿಧ ಮುಖಂಡರ ಪ್ರಯತ್ನದಿಂದ ಕಾರ್ಖಾನೆ ಆಡಳಿತ ಮಂಡಳಿ ರೈತರ ಬೇಡಿಕೆಗೆ ಸ್ಪಂದಿಸಿರುವುದು ಸ್ವಾಗತಾರ್ಹ. ಪ್ರಸಕ್ತ ಹಂಗಾಮಿನಲ್ಲಿ ರೈತರು ಉತ್ತಮ ದರದ ನಿರೀಕ್ಷೆಯಲ್ಲಿದ್ದರು. ಇದೀಗ ₹3,700 ದರ ಘೋಷಣೆಯಾಗಿರುವುದು ರೈತರಿಗೆ ಕೊಂಚ ನೆಮ್ಮದಿ ತಂದಿದೆ ಎಂದು ಅವರು ಅಭಿಪ್ರಾಯಪಟ್ಟರು.
ಇದೇ ವೇಳೆ ಈ ಬಾರಿ ಬರಗಾಲದ ವಾತಾವರಣದಿಂದ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಮೇವು ಒದಗಿಸುವುದು ಸವಾಲಾಗಿದೆ. ಆದ್ದರಿಂದ ರೈತರ ದನಕರುಗಳಿಗೆ ನೀರು ಮತ್ತು ಮೇವು ಒದಗಿಸುವ ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿದರು.
ಬರಗಾಲದ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದಲ್ಲಿ ನೀರು ಹಾಗೂ ಆಹಾರದ ಅಭಾವ ಹೆಚ್ಚಾಗುವ ಸಾಧ್ಯತೆಯಿದೆ. ಇಂತಹ ಪರಿಸ್ಥಿತಿಯಲ್ಲಿ ಕೆಲವೆಡೆ ಕಳ್ಳತನದ ಘಟನೆಗಳು ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಪೊಲೀಸ್ ಇಲಾಖೆ ಇಂತಹ ಘಟನೆಗಳನ್ನು ತಡೆಗಟ್ಟಲು ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಗ್ರಾಮ ಪಂಚಾಯಿತಿ ಅಧಿಕಾರಿಗಳು ಪ್ರತಿ ಹಳ್ಳಿಯ ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದರೆ ಕಳ್ಳತನ ಸೇರಿದಂತೆ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಲು ಸಹಕಾರಿಯಾಗಲಿದೆ ಎಂದು ಸುಭಾಷ್ ಚಟ್ಟರಕಿ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ರೈತ ಮುಖಂಡರು ಹಾಗೂ ರೈತರು ಇದ್ದರು.

