ಉದಯರಶ್ಮಿ ದಿನಪತ್ರಿಕೆ
ತಿಕೋಟಾ: ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪಂಚ ನೌಕರರಿಗೆ ಕಾರ್ಮಿಕ ಇಲಾಖೆಯ ಆದೇಶದಂತೆ ವೇತನ ಪಾವತಿಸುವಂತೆ ಆಗ್ರಹಿಸಿ ಪಂಚ ನೌಕರರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಮಂಗಳವಾರ ತಾಲ್ಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಆನಂದಕುಮಾರ ಮ್ಯಾಗೇರಿ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಘದ ಶಂಕರ ಭೂವಿನ ಮಾತನಾಡಿ, ಗ್ರಾಮ ಪಂಚಾಯಿತಿಗಳಲ್ಲಿ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್, ಕರ ವಸೂಲಿಗಾರ, ನೀರುಗಂಟಿ, ಜವಾನ ಹಾಗೂ ಸ್ವಚ್ಛತಗಾರರಾಗಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ನೌಕರರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಗ್ರಾಮೀಣ ಜನರಿಗೆ ಕುಡಿಯುವ ನೀರು, ಸ್ವಚ್ಛತೆ ಸೇರಿದಂತೆ ಮೂಲಸೌಕರ್ಯ ಕಲ್ಪಿಸುವಲ್ಲಿ ಹಾಗೂ ಪಂಚಾಯಿತಿ ಆಡಳಿತದ ದೈನಂದಿನ ಕಾರ್ಯನಿರ್ವಹಣೆಯಲ್ಲಿ ನೌಕರರ ಪಾತ್ರ ಮಹತ್ವದ್ದಾಗಿದೆ ಎಂದರು.
ದಿನಾಂಕ 22-05-2026ರಂದು ಕಾರ್ಮಿಕ ಇಲಾಖೆಯು ಹೊರಡಿಸಿರುವ ಅಧಿಸೂಚನೆಯಂತೆ ವೇತನ ಪಾವತಿಸಬೇಕು. ಈ ಕುರಿತು ಹೈಕೋರ್ಟ್ ಕೂಡ ಆದೇಶ ನೀಡಿದೆ. ಸರ್ಕಾರದಿಂದ ಹೆಚ್ಚುವರಿ ಅನುದಾನ ಬಿಡುಗಡೆಯಾಗದಿದ್ದರೂ ಗ್ರಾಮ ಪಂಚಾಯಿತಿಗಳ ಸ್ವಂತ ಸಂಪನ್ಮೂಲದಿಂದ ನೌಕರರ ವೇತನ ಪಾವತಿಸಲು ಸೂಚಿಸಲಾಗಿದೆ. ಆದ್ದರಿಂದ ಕಾರ್ಮಿಕ ಇಲಾಖೆಯ ಆದೇಶದಂತೆ ವೇತನ ಪಾವತಿಸಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಚನ್ನಬಸವ ಪೂಜೇರಿ, ಶರಣು ಜಿಡ್ಡಿ, ಶಿವಾನಂದ ಪತ್ತಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.

