ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ, ಜನವರಿ ೧, ೨೦೨೭ ಅನ್ನು ಅರ್ಹತಾ ದಿನಾಂಕವಾಗಿ ಪರಿಗಣಿಸಿ ಜಿಲ್ಲೆಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (SSಖ–೨೦೨೭) ಕೈಗೊಳ್ಳಲಾಗುತ್ತಿದ್ದು, ಈ ಪ್ರಕ್ರಿಯೆಗೆ ವೇಳಾಪಟ್ಟಿ ನಿಗದಿಪಡಿಸಲಾಗಿದೆ
ಮತದಾರರ ಪಟ್ಟಿಯಿಂದ ಹೊರಗುಳಿದಿರುವ ಯುವ ಮತದಾರರು ಹಾಗೂ ಮೊದಲ ಬಾರಿಗೆ ಮತದಾರರಾಗಲು ಅರ್ಹತೆ ಹೊಂದಿರುವವರನ್ನು ಪಟ್ಟಿಗೆ ಸೇರ್ಪಡೆಗೊಳಿಸುವ ಉದ್ದೇಶದಿಂದ ಈ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಜನವರಿ ೧ರ ಅರ್ಹತಾ ದಿನಾಂಕದ ಆಧಾರದ ಮೇಲೆ ಮತದಾರರ ನೋಂದಣಿಗೆ ಅವಕಾಶ ಕಲ್ಪಿಸುವುದರ ಜೊತೆಗೆ, ಮುಂದಿನ ಮೂರು ಅರ್ಹತಾ ದಿನಾಂಕಗಳಾದ ಏಪ್ರಿಲ್ ೧, ಜುಲೈ ೧ ಮತ್ತು ಅಕ್ಟೋಬರ್ ೧, ೨೦೨೭ಕ್ಕೆ ಮುಂಗಡ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ.
ನಿಗದಿತ ವೇಳಾಪಟ್ಟಿಯಂತೆ ನವೆಂಬರ್ ೨೩ರಂದು ಮತಗಟ್ಟೆಗಳ ತರ್ಕಬದ್ಧಗೊಳಿಸುವಿಕೆ ಕಾರ್ಯ ಕೈಗೊಳ್ಳಲಾಗುತ್ತದೆ. ಡಿಸೆಂಬರ್ ೧ರಂದು ಸಮಗ್ರ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ಡಿಸೆಂಬರ್ ೧ರಿಂದ ೩೧ರವರೆಗೆ ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸಲ್ಲಿಕೆಯಾದ ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಜನವರಿ ೧೪ರಂದು ವಿಲೇವಾರಿ ಮಾಡಲಾಗುತ್ತದೆ. ಅಂತಿಮವಾಗಿ ಜ.೨೦ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು.
ಅರ್ಹರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗಾಗಿ ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಚುನಾವಣಾ ಆಯೋಗದ ಅಧಿಕೃತ ಮತದಾರರ ಸೇವಾ ಪೋರ್ಟಲ್ voಣeಡಿs.eಛಿi.gov.iಟಿ ಅಥವಾ ಚುನಾವಣಾ ಆಯೋಗದ ಇಅIಓಇಖಿ ಮೊಬೈಲ್ ಅಪ್ಲಿಕೇಶನ್ ಬಳಸಬಹುದಾಗಿದೆ. ಅಲ್ಲದೆ, ತಮ್ಮ ವ್ಯಾಪ್ತಿಯ ಬೂತ್ ಮಟ್ಟದ ಅಧಿಕಾರಿ ಸಹಾಯಕ ಮತದಾರರ ನೋಂದಣಾಧಿಕಾರಿ ಅಥವಾ ಮತದಾರರ ನೋಂದಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದಾಗಿದೆ.
ಜಿಲ್ಲೆಯ ಎಲ್ಲ ಅರ್ಹ ನಾಗರಿಕರು ಈ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಪ್ರಕ್ರಿಯೆಯ ಸದುಪಯೋಗ ಪಡೆದುಕೊಂಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆಯಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ್.ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
