ನ.೧೯ರಿಂದ ೨೧ರವರೆಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ವಿಜಯಪುರ ಪ್ರವಾಸ | ಜಿಪಂ ಸಭಾಂಗಣದಲ್ಲಿ ಬಾಕಿ ದೂರು ವಿಚಾರಣೆ | ಲೋಕಾಯುಕ್ತ ಜಿಲ್ಲಾ ಪೊಲೀಸ್ ಅಧೀಕ್ಷಕ ಮಹಾನಿಂಗರಾಯ ನಂದಗಾಂವಿ ಹೇಳಿಕೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ಲೋಕಾಯುಕ್ತದ ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ನವೆಂಬರ್ ೧೯ರಿಂದ ೨೧ರವರೆಗೆ ವಿಜಯಪುರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲೆಗೆ ಸಂಬಂಧಿಸಿದಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ ಹಾಗೂ ಉಪಲೋಕಾಯುಕ್ತರ ಕಾರ್ಯವ್ಯಾಪ್ತಿಗೆ ಒಳಪಡುವ ತನಿಖೆ ಮತ್ತು ವಿಚಾರಣೆಗೆ ಬಾಕಿಯಿರುವ ಪ್ರಕರಣಗಳನ್ನು ಇತ್ಯರ್ಥಪಡಿಸುವ ಉದ್ದೇಶದಿಂದ ದೂರುದಾರರು ಮತ್ತು ಎದುರುದಾರರ ಸಮ್ಮುಖದಲ್ಲಿ ವಿಚಾರಣೆ ನಡೆಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ಈಗಾಗಲೇ ಲೋಕಾಯುಕ್ತ ಸಂಸ್ಥೆಯಲ್ಲಿ ದೂರು ದಾಖಲಿಸಿರುವ ದೂರುದಾರರು ನಿಗದಿಪಡಿಸಿದ ದಿನಾಂಕ ಹಾಗೂ ಸಮಯದಲ್ಲಿ ಅಗತ್ಯ ದಾಖಲೆಗಳೊಂದಿಗೆ ಹಾಜರಾಗಿ ವಿಚಾರಣೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರ್ನಾಟಕ ಲೋಕಾಯುಕ್ತ ಜಿಲ್ಲಾ ಪೊಲೀಸ್ ಅಧೀಕ್ಷಕ ಮಹಾನಿಂಗರಾಯ ನಂದಗಾಂವಿ ತಿಳಿಸಿದ್ದಾರೆ.
ಸಾರ್ವಜನಿಕ ದೂರುಗಳ ವಿಚಾರಣೆಯು ನವೆಂಬರ್ ೧೯ ಮತ್ತು ೨೦ರಂದು ವಿಜಯಪುರ ಜಿಲ್ಲಾ ಪಂಚಾಯಿತಿ ಕಚೇರಿ ಆವರಣದ ಸಭಾಂಗಣದಲ್ಲಿ ನಡೆಯಲಿದೆ. ಎರಡೂ ದಿನ ಬೆಳಿಗ್ಗೆ ೧೦ರಿಂದ ಮಧ್ಯಾಹ್ನ ೧.೩೦ರವರೆಗೆ ಹಾಗೂ ಮಧ್ಯಾಹ್ನ ೨.೩೦ರಿಂದ ಸಂಜೆ ೫.೩೦ರವರೆಗೆ ವಿಚಾರಣೆ ನಡೆಯಲಿದೆ.
ಈ ಅವಧಿಯಲ್ಲಿ ಸಾರ್ವಜನಿಕರಿಂದ ಯಾವುದೇ ಹೊಸ ದೂರುಗಳನ್ನು ಸ್ವೀಕರಿಸಲಾಗುವುದಿಲ್ಲ. ಈಗಾಗಲೇ ಲೋಕಾಯುಕ್ತದಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ವಿಚಾರಣೆ ಮಾತ್ರ ನಡೆಯಲಿದ್ದು, ಸಂಬಂಧಪಟ್ಟ ದೂರುದಾರರು ನಿಗದಿತ ಸಮಯಕ್ಕೆ ಹಾಜರಾಗುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
