ಉದಯರಶ್ಮಿ ದಿನಪತ್ರಿಕೆ
ಕೊಲ್ಹಾರ: ವಿದ್ಯಾರ್ಥಿಗಳು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸುವ ಮೂಲಕ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಬೇಕು. ಸ್ಪರ್ಧೆಯಲ್ಲಿ ಸೋಲು-ಗೆಲುವು ಸಹಜವಾಗಿದ್ದು, ಎರಡನ್ನೂ ಸಮಾನ ಮನೋಭಾವದಿಂದ ಸ್ವೀಕರಿಸುವ ಗುಣ ಬೆಳೆಸಿಕೊಳ್ಳಬೇಕು ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ ದಸ್ತಗೀರ ಕಲಾದಗಿ ಹೇಳಿದರು.
ಪಟ್ಟಣದ ಶ್ರೀ ಸಂಗಮೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವಿಜಯಪುರ ಹಾಗೂ ಶ್ರೀ ಸಂಗಮೇಶ್ವರ ವಿದ್ಯಾವರ್ಧಕ ಸಂಘದ ಸಹಯೋಗದಲ್ಲಿ 2026–27ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಜಿಲ್ಲಾಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ನಾನು ಇದೇ ಸಂಸ್ಥೆಯಲ್ಲಿ ಎಲ್‌ಕೆಜಿಯಿಂದ ಎಸ್‌ಎಸ್‌ಎಲ್‌ಸಿವರೆಗೆ ವಿದ್ಯಾಭ್ಯಾಸ ಮಾಡಿದ್ದು, ಇಂದು ಪಟ್ಟಣ ಪಂಚಾಯಿತಿ ಅಧ್ಯಕ್ಷನಾಗಲು ಈ ಸಂಸ್ಥೆಯ ಶಿಕ್ಷಣ ಹಾಗೂ ಮಾರ್ಗದರ್ಶನವೇ ಪ್ರಮುಖ ಕಾರಣವಾಗಿದೆ. ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಬೆಳೆಸಲಾಗುತ್ತಿದೆ. ಸಂಸ್ಥೆಯ ವತಿಯಿಂದ ಹಮ್ಮಿಕೊಳ್ಳುವ ಕಾರ್ಯಕ್ರಮಗಳು ಸದಾ ಯಶಸ್ವಿಯಾಗಿ ನಡೆಯುತ್ತವೆ. ಇಂದಿನ ಸಾಂಸ್ಕೃತಿಕ ಸ್ಪರ್ಧೆಯೂ ಯಶಸ್ವಿಯಾಗಲಿ’ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದ ಅತಿಥಿಯಾಗಿ ಮಾತನಾಡಿದ ಶ್ರೀ ಸಂಗಮೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಎಸ್.ಬಿ. ಪತಂಗಿ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ವಿಭಿನ್ನ ಪ್ರತಿಭೆಗಳು ಅಡಗಿರುತ್ತವೆ. ಅವುಗಳನ್ನು ಗುರುತಿಸಿ, ಪ್ರೋತ್ಸಾಹಿಸಿ ಹೊರತರುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ವಿದ್ಯಾರ್ಥಿಗಳ ಪ್ರತಿಭೆಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸುವುದಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ, ತಮ್ಮ ಪ್ರತಿಭೆಯನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಶಾಲಾ ಶಿಕ್ಷಣ ಇಲಾಖೆಯ ಶಾಖಾಧಿಕಾರಿ ಬಿ.ಟಿ. ಗೊಂಗಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಸಂಗಮೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಬಿ.ಯು. ಗಿಡ್ಡಪ್ಪಗೋಳ ವಹಿಸಿದ್ದರು. ಮಾಜಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಸದಸ್ಯ ಸಿ.ಎಸ್. ಗಿಡ್ಡಪ್ಪಗೋಳ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು.
ಸಂಸ್ಥೆಯ ನಿರ್ದೇಶಕರಾದ ಟಿ.ಟಿ. ಹಗೇದಾಳ, ಎಸ್.ಸಿ. ಶೀಲವಂತ, ನಿವೃತ್ತ ಶಿಕ್ಷಕ ಪಿ.ಸಿ. ನಾಗರಾಳ, ಮಹಾಮಂಡಳ ಪ್ರಾಚಾರ್ಯರ ಅಧ್ಯಕ್ಷ ಡಿ.ಬಿ. ತಿಕೋಟಿ, ರಾಜ್ಯ ಉಪಾಧ್ಯಕ್ಷ ಎಲ್.ಐ. ಹುಣಸಿಕಟ್ಟಿ, ಸಂಘದ ಜಿಲ್ಲಾಧ್ಯಕ್ಷ ಎಂ.ಡಿ. ಹೆಬ್ಬಿ, ಪ್ರಾಚಾರ್ಯ ಡಾ. ಎ.ಡಿ. ಚವ್ಹಾಣ, ಮುಖ್ಯ ಶಿಕ್ಷಕ ರಾಜಶೇಖರ ಉಮರಾಣಿ, ದೈಹಿಕ ಶಿಕ್ಷಣ ಉಪನ್ಯಾಸಕ ರಮೇಶ ತೋಟದ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಪ್ರಾಚಾರ್ಯ ಡಾ. ಎ.ಡಿ. ಚವ್ಹಾಣ ಸ್ವಾಗತಿಸಿದರು. ಉಪನ್ಯಾಸಕ ಮಂಜುನಾಥ ಮಟ್ಯಾಳ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

