ಜನಸಾಮಾನ್ಯರ ಮೇಲೆ ಆರ್ಥಿಕ ಹೊರೆ ಹಾಕುವ ನಿರ್ಧಾರ ಖಂಡನೀಯ | ದರ ಏರಿಕೆ ಹಿಂಪಡೆಯದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ | ಸರ್ಕಾರಕ್ಕೆ ಮನವಿ ಸಲ್ಲಿಕೆ
ಉದಯರಶ್ಮಿ ದಿನಪತ್ರಿಕೆ
ಕೊಲ್ಹಾರ: ಕರ್ನಾಟಕ ರಾಜ್ಯ ಸರ್ಕಾರ ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಬಸ್ ಪ್ರಯಾಣ ದರ ಏರಿಕೆ ಮಾಡಿರುವುದನ್ನು ತೀವ್ರವಾಗಿ ಖಂಡಿಸಿರುವ ಕರ್ನಾಟಕ ರಕ್ಷಣಾ ವೇದಿಕೆ, ಕೂಡಲೇ ದರ ಏರಿಕೆ ನಿರ್ಧಾರವನ್ನು ಹಿಂಪಡೆಯುವಂತೆ ಒತ್ತಾಯಿಸಿ ಬುಧವಾರ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.
ಕರ್ನಾಟಕ ರಕ್ಷಣಾ ವೇದಿಕೆಯ (ಪ್ರವೀಣ ಶೆಟ್ಟಿ ಬಣ) ತಾಲೂಕು ಘಟಕದ ಅಧ್ಯಕ್ಷ ರವಿ ಗೊಳಸಂಗಿ ನೇತೃತ್ವದಲ್ಲಿ ಸಲ್ಲಿಸಿದ ಮನವಿಯಲ್ಲಿ, ಬಸ್ ಪ್ರಯಾಣ ದರ ಏರಿಕೆಯಿಂದ ಬಡವರು, ವಿದ್ಯಾರ್ಥಿಗಳು, ಕಾರ್ಮಿಕರು ಹಾಗೂ ದಿನನಿತ್ಯ ಪ್ರಯಾಣಿಸುವ ಜನಸಾಮಾನ್ಯರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಯಿತು.
ಸರ್ಕಾರದ ದರ ಏರಿಕೆ ಕ್ರಮ ಜನವಿರೋಧಿಯಾಗಿದ್ದು, ಜನರ ಹಿತ ಕಾಪಾಡಬೇಕಾದ ಸರ್ಕಾರವೇ ಜನರ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಹೇರುವುದು ಸರಿಯಲ್ಲ. ಅಧಿಕಾರಕ್ಕೆ ಬರುವ ಮುನ್ನ ಜನರಿಗೆ ನೂರಾರು ಭರವಸೆಗಳನ್ನು ನೀಡಿದ ಸರ್ಕಾರ, ಇದೀಗ ಬೆಲೆ ಏರಿಕೆ ಹಾಗೂ ಪ್ರಯಾಣ ದರ ಹೆಚ್ಚಳದ ಮೂಲಕ ಜನಸಾಮಾನ್ಯರ ಬದುಕನ್ನು ಸಂಕಷ್ಟಕ್ಕೆ ದೂಡುತ್ತಿದೆ. ಇಂತಹ ಆಡಳಿತ ನೀತಿ ಖಂಡನೀಯವಾಗಿದ್ದು, ಮುಖ್ಯಮಂತ್ರಿ ಕೂಡಲೇ ಬಸ್ ಪ್ರಯಾಣ ದರ ಏರಿಕೆ ಆದೇಶವನ್ನು ಹಿಂಪಡೆಯಬೇಕು ಎಂದು ಸಂಘಟನೆಯ ಪದಾಧಿಕಾರಿಗಳು ಒತ್ತಾಯಿಸಿದರು.
ಸರ್ಕಾರ ಜನರ ಸಂಕಷ್ಟವನ್ನು ಅರಿತು ದರ ಏರಿಕೆ ನಿರ್ಧಾರವನ್ನು ತಕ್ಷಣ ವಾಪಸ್ ಪಡೆಯಬೇಕು. ಇಲ್ಲವಾದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಅಧ್ಯಕ್ಷ ರವಿ ಗೊಳಸಂಗಿ, ಶ್ರೀಧರ ಬಳೆಗಾರ, ಪ್ರದೀಪ ಪಾಟೀಲ, ಯಮನೂರಿ ಮಾಕಾಳಿ, ಪರಶುರಾಮ ಮಾಕಾಳಿ, ಶಿವು ವಾಲಿಕಾರ, ಸುರೇಶ ದಳವಾಯಿ, ಅಶೋಕ ಗಣಿ ಹಾಗೂ ಸುರೇಶ ಸಾರವಾಡ ಉಪಸ್ಥಿತರಿದ್ದರು.

