ವಿಜಯಪುರದಲ್ಲಿ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ವಿವರಣೆ
ವಿಜಯಪುರ: ಜಿಲ್ಲೆಯಲ್ಲಿ ತಾವು ಕೈಗೊಂಡ ಮೂರು ದಿನಗಳ ಪ್ರವಾಸದ ಸಂದರ್ಭದಲ್ಲಿ ಎರಡು ದಿನಗಳಲ್ಲಿ ಒಟ್ಟು ೧೧೫ ಪ್ರಕರಣಗಳ ವಿಚಾರಣೆ ನಡೆಸಿ, ೮೦ ಪ್ರಕರಣಗಳನ್ನು ಸ್ಥಳದಲ್ಲಿಯೇ ಇತ್ಯರ್ಥಪಡಿಸಲಾಗಿದೆ ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ತಿಳಿಸಿದರು.
ನಗರದ ಹೊಸ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನವೆಂಬರ್ ೧೯ ಮತ್ತು ೨೦ರಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಬಾಕಿಯಿದ್ದ ೧೧೫ ಪ್ರಕರಣಗಳ ವಿಚಾರಣೆ ನಡೆಸಲಾಗಿದೆ. ಈ ಪೈಕಿ ೮೦ ಪ್ರಕರಣಗಳನ್ನು ಸ್ಥಳದಲ್ಲಿಯೇ ಇತ್ಯರ್ಥಪಡಿಸಲಾಗಿದ್ದು, ಉಳಿದ ೩೫ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಅರ್ಜಿದಾರರ ದೂರುಗಳನ್ನು ಕಾನೂನಿನನ್ವಯ ಶೀಘ್ರವಾಗಿ ಪರಿಶೀಲಿಸಿ, ಅರ್ಜಿಗಳನ್ನು ವಿಲೇವಾರಿ ಮಾಡಿ ಲೋಕಾಯುಕ್ತ ಕೇಂದ್ರ ಕಚೇರಿಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದರು.
ಸರ್ಕಾರಿ ಕಚೇರಿಗಳಿಗೆ ಬರುವ ಸಾರ್ವಜನಿಕರ ಕೆಲಸಗಳನ್ನು ನಿಗದಿತ ಕಾಲಮಿತಿಯೊಳಗೆ ನಿರ್ವಹಿಸಬೇಕು ನಿಗದಿತ ಅವಧಿಯಲ್ಲಿ ಸಾರ್ವಜನಿಕರ ಕೆಲಸಗಳನ್ನು ಮಾಡಿಕೊಡದಿದ್ದಲ್ಲಿ, ನಿಖರ ಹಾಗೂ ಸ್ಪಷ್ಟತೆಯಿಂದ ಪೂರಕ ದಾಖಲೆಗಳೊಂದಿಗೆ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ಸಲ್ಲಿಸಬಹುದು ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಮಹಾನಿಂಗರಾಯ ನಂದಗಾವಿ, ಉಪ ಲೋಕಾಯುಕ್ತರ ಆಪ್ತ ಕಾರ್ಯದರ್ಶಿ ಕಿರಣ್ ಪಾಟೀಲ,ಸಿಪಿಐ ಆನಂದ ಟಕ್ಕಣ್ಣವರ ಸೇರಿದಂತೆ ಕರ್ನಾಟಕ ಲೋಕಾಯುಕ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು

