ವಿಜಯಪುರದಲ್ಲಿ ನಡೆದ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಡಾ.ಎಂ.ಬಿ. ಪಾಟೀಲ ಅಧಿಕಾರಿಗಳಿಗೆ ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯಲ್ಲಿ ಲಭ್ಯವಿರುವ ನೀರನ್ನು ಸಮರ್ಪಕವಾಗಿ ನಿರ್ವಹಿಸಿ, ಕುಡಿಯುವ ನೀರಿನ ಅಗತ್ಯಕ್ಕೆ ಮೊದಲ ಆದ್ಯತೆ ನೀಡಬೇಕು. ನೀರಿನ ಹಂಚಿಕೆಯಲ್ಲಿ ಸಮನ್ವಯ ಸಾಧಿಸಿ, ನಿಗದಿತ ಹಂಚಿಕೆಯಂತೆ ಎಲ್ಲ ಪ್ರದೇಶಗಳಿಗೂ ಅದರಲ್ಲೂ ಕೊನೆಯ ಅಂಚಿನ ಪ್ರದೇಶಗಳಿಗೂ ಸಮರ್ಪಕವಾಗಿ ನೀರು ತಲುಪಿಸುವಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಡಾ.ಎಂ.ಬಿ. ಪಾಟೀಲ ಅವರು ಸೂಚಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಮಳೆ ಕೊರತೆಯಿಂದ ನೀರಿನ ಲಭ್ಯತೆ ಕಡಿಮೆಯಾಗಿದೆ. ಪ್ರಸ್ತುತ ಆಲಮಟ್ಟಿ ಜಲಾಶಯದಲ್ಲಿ ನೀರು ಸಂಗ್ರಹ ಕಡಿಮೆ ಇದೆ, ಮುಂಬರುವ ದಿನಗಳಲ್ಲಿ ತ ಮಳೆಯಾಗದಿದ್ದರೆ ನೀರಿನ ನಿರ್ವಹಣೆ ಸವಾಲಾಗಲಿದೆ. ಈ ಹಿನ್ನೆಲೆಯಲ್ಲಿ ನೀರಾವರಿ ಸಚಿವರು, ಈ ಭಾಗದ ಶಾಸಕರು, ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮುಂದಿನ ಅವಧಿಗೆ ನೀರಿನ ಸಮರ್ಪಕ ನಿರ್ವಹಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಕುಡಿಯುವ ನೀರಿಗಾಗಿ ಜಿಲ್ಲೆಗೆ ನಿಗದಿಪಡಿಸಿರುವ ಎರಡು ಟಿಎಂಸಿ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಇಂಡಿ ಹಾಗೂ ನಾಗಠಾಣ ಕ್ಷೇತ್ರಗಳ ಕೆಲವು ಪ್ರದೇಶಗಳಿಗೆ ಇ ನೀರು ತಲುಪಿಸಿ ಗಮನಹರಿಸಿ, ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಮೂಲಕ ಯಾವುದೇ ತೊಂದರೆಯಾಗದಂತೆ ನೀರು ಪೂರೈಸಬೇಕು. ಕೆರೆ ತುಂಬಿಸುವ ಯೋಜನೆಗಳನ್ನು ನಿಗದಿತ ನೀರಿನ ಹಂಚಿಕೆಯಂತೆ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಲಭ್ಯತೆ, ಕೆರೆ ತುಂಬಿಸುವ ಯೋಜನೆಗಳ ಪ್ರಗತಿ, ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಅನುನ, ಜಲಧಾರೆ ಯೋಜನೆಯ ತಾಂತ್ರಿಕ ಸಮಸ್ಯೆಗಳು ಹಾಗೂ ಬರ ನಿರ್ವಹಣೆಗೆ ಸಂಬಂಧಿಸಿದಂತೆ ಚರ್ಚಿಸಲಾಯಿತು ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ, ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಸಂತ ಸಿದ್ದಾಮಪ್ಪ ಹೊನಮೋಡೆ, ಕೆಡಿಪಿ ನಾಮನಿರ್ದೇಶಿತ ಸದಸ್ಯರಾದ ಶಿವಣ್ಣ ಪಿ. ಕೋಟಾರಗಸ್ತಿ, ನೂರಅಹ್ಮದ ಅತ್ತಾರ, ಸತೀಶಕುಮಾರ ಅಡವಿ ಹಾಗೂ ಶ್ರೀಮತಿ ಪ್ರಿಯಾಂಕ ಚೇತನ ತೊರವಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ ಪ್ರಕಾಶ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

“ಅರಣ್ಯ ಇಲಾಖೆಯ ಕೆಲವು ಕಾರ್ಯಗಳಿಂದ ಕುಡಿಯುವ ನೀರಿನ ಪೂರೈಕೆಗೆ ತೊಂದರೆಯಾಗದಂತೆ ಕ್ರಮವಹಿಸಬೇಕು. ನಗರ ಪ್ರದೇಶಗಳಲ್ಲಿ ನೀರು ಪೂರೈಕೆಯ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಪರಿಹರಿಸಬೇಕು. ಜಲಧಾರೆ ಯೋಜನೆ ನಿಗದಿತ ಅವಧಿಯಲ್ಲಿ ಪೂರ್ಣಗೊಂಡರೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯಲಿದೆ.”
– ಶಿವಾನಂದ ಪಾಟೀಲ
ಬಸವನಬಾಗೇವಾಡಿ ಶಾಸಕರು

“ಲಭ್ಯವಿರುವ ನೀರನ್ನು ವ್ಯರ್ಥವಾಗದಂತೆ ಸಮರ್ಪಕವಾಗಿ ಬಳಸಿಕೊಳ್ಳಬೇಕು. ಎಲ್ಲರಿಗೂ ಸಮಾನವಾಗಿ, ಕೊನೆಯ ಅಂಚಿನವರೆಗೂ ನೀರು ತಲುಪಿಸಬೇಕು. ನೀರಿನ ಹಂಚಿಕೆ ಹಾಗೂ ನಿರ್ವಹಣೆಯಲ್ಲಿ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಇಂಡಿ ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳ ಕುಡಿಯುವ ನೀರಿನ ಅಗತ್ಯಕ್ಕೆ ಆದ್ಯತೆ ನೀಡಬೇಕು.”
– ಯಶವಂತರಾಯಗೌಡ ಪಾಟೀಲ
ಶಾಸಕರು, ಇಂಡಿ

” ಕೆರೆ ತುಂಬಿಸುವ ಸಂದರ್ಭದಲ್ಲಿ ಅಧಿಕಾರಿಗಳು ವಿಶೇಷ ನಿಗಾ ವಹಿಸಬೇಕು. ಸಂಬAಧಿಸಿದ ಇಲಾಖೆಗಳ ಸಮನ್ವಯದೊಂದಿಗೆ ಕೆರೆಗಳಿಗೆ ನೀರು ಹರಿಸಬೇಕು ನಾರಾಯಣಪುರ ಜಲಾಶಯ ಆಧಾರಿತ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳಿಗೆ ಸಮರ್ಪಕವಾಗಿ ನೀರು ಪೂರೈಸಲು ಕ್ರಮವಹಿಸಬೇಕು.”
– ಸಿ.ಎಸ್. ನಾಡಗೌಡ
ಶಾಸಕರು, ಮುದ್ದೇಬಿಹಾಳ

“ಐಸಿಸಿ ಸಭೆಯಲ್ಲಿ ನಿಗದಿಪಡಿಸಿದಂತೆ ಕೆರೆ ತುಂಬಿಸುವ ಯೋಜನೆಗಳಿಗೆ ಸಮರ್ಪಕವಾಗಿ ಬಳಸಿಕೊಳ್ಳಬೇಕು. ನಿಗದಿತ ಪ್ರಮಾಣದ ನೀರು ಸದ್ಬಳಕೆಯಾಗುವಂತೆ ಅಧಿಕಾರಿಗಳು ಕ್ರಮವಹಿಸಬೇಕು.”
– ಅಶೋಕ ಮನಗೂಳಿ
ಸಿಂದಗಿ ಶಾಸಕರು

