ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ವಾರ್ಡ್ ನಂ. ೨೭ರ ಮುಬೀನ್ ಚೌಕ್ನಿಂದ ನವಬಾಗ್ ರಸ್ತೆಯವರೆಗೆ ನಡೆಯುತ್ತಿರುವ ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ಹೊರ ಚರಂಡಿ ವ್ಯವಸ್ಥೆ ಮಾಡದೆ ಹಾಗೂ ಸುಮಾರು ೧೦ ರಿಂದ ೧೨ ಅಡಿಗಳಷ್ಟು ಸರ್ಕಾರಿ ಜಾಗ ಒತ್ತುವರಿಯಾಗಿದ್ದರೂ ಅದನ್ನು ತೆರವುಗೊಳಿಸದೆ ಕಾಮಗಾರಿ ಕೈಗೆತ್ತಿಕೊಂಡಿರುವುದಕ್ಕೆ ಸ್ಥಳೀಯ ನಾಗರಿಕರು ಆಕ್ಷೇಪ ವ್ಯಕ್ತಪಡಿಸಿ ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಗಿ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಇಜಾಜ್ ಅಹಮದ್ ಮುಕ್ಬಿಲ್ ಸೇರಿದಂತೆ ಹಲವರು ಮಾತನಾಡಿ, ರಸ್ತೆಯುದ್ದಕ್ಕೂ ಕೆಲವರು ಸರ್ಕಾರಿ ಜಾಗವನ್ನು ಅತಿಕ್ರಮಿಸಿಕೊಂಡಿದ್ದಾರೆ ಎನ್ನಲಾಗಿದ್ದು, ಇದರಿಂದ ರಸ್ತೆಯ ಅಗಲ ಕಡಿಮೆಯಾಗಿದೆ. ಪರಿಣಾಮವಾಗಿ ಪ್ರತಿದಿನ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದ್ದು, ಈ ಮಾರ್ಗದಲ್ಲಿ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಶಾಲಾ ಮಕ್ಕಳು, ವೃದ್ಧರು, ರೋಗಿಗಳು ಸೇರಿದಂತೆ ಸಾರ್ವಜನಿಕರು ನಿತ್ಯ ಸಂಕಷ್ಟ ಅನುಭವಿಸುವಂತಾಗಿದೆ. ಈ ಕುರಿತು ವಾರ್ಡ್ನ ನಾಗರಿಕರು ಈಗಾಗಲೇ ವಿಜಯಪುರ ಜಿಲ್ಲಾಧಿಕಾರಿಗಳು ಹಾಗೂ ಮಹಾನಗರ ಪಾಲಿಕೆ ಆಯುಕ್ತರಿಗೆ ಲಿಖಿತ ಮನವಿ ಸಲ್ಲಿಸಿ, ಸರ್ಕಾರಿ ಜಾಗದ ಒತ್ತುವರಿ ತೆರವುಗೊಳಿಸುವಂತೆ ಒತ್ತಾಯಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸರ್ಕಾರಿ ಜಾಗದ ಸಮೀಕ್ಷೆ ನಡೆಸಿ ಒತ್ತುವರಿಯನ್ನು ತೆರವುಗೊಳಿಸಬೇಕು. ನಂತರ ರಸ್ತೆ ಅಗಲಕ್ಕೆ ಅನುಗುಣವಾಗಿ ಅಗತ್ಯ ಹೊರಚರಂಡಿ ವ್ಯವಸ್ಥೆ ಕಲ್ಪಿಸಿ ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯ ತೋರಿರುವ ಸಂಬಂಧಪಟ್ಟ ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ಸರ್ವೆ ಅಧಿಕಾರಿಗಳ ವಿರುದ್ಧ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಮಹ್ಮದ ಗೌಸ್ ಖಾದ್ರಿ, ಸಾಧಿಕ ರೋಜಿಂದಾರ, ಅರಬಾದ ಶೇಖ, ಸಲೀಂ ಕೋಲಾರ, ಶಾಹಿದ ಮುಲ್ಲಾ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

