ಉದಯರಶ್ಮಿ ದಿನಪತ್ರಿಕೆ
ಇಂಡಿ: ಶಿಕ್ಷಕರು ಕೇವಲ ಪಾಠ ಬೋಧನೆಗೆ ಸೀಮಿತವಾಗದೆ, ತಮ್ಮ ಬಹುಮುಖ ಪ್ರತಿಭೆಯನ್ನು ಪ್ರದರ್ಶಿಸಲು ಸಹಪಠ್ಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು ಎಂದು ದೈಹಿಕ ಶಿಕ್ಷಣ ಪರಿವೀಕ್ಷಕ ಪಿ ಬಿ ಕಾಲವಾಡ ಹೇಳಿದರು.
ಬುಧವಾರ ನಗರದ ಗುರುಭವನದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ಪಂಚಾಯತ್ ವಿಜಯಪುರ ರಾಷ್ಟ್ರೀಯ ಶಿಕ್ಷಕರ ಕಲ್ಯಾಣ ಪ್ರತಿಷ್ಠಾನ, ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ, ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ಬೆಂಗಳೂರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯದ ಸಹಯೋಗದಲ್ಲಿ ಹಮ್ಮಿಕೊಂಡ ತಾಲೂಕ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆ ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವರ್ಷವಿಡೀ ತರಗತಿ ಬೋಧನೆಯಲ್ಲಿ ನಿರತರಾಗುವ ಶಿಕ್ಷಕರು, ತಮ್ಮಲ್ಲಿ ಹುದುಗಿರುವ ವಿವಿಧ ಪ್ರತಿಭೆಗಳನ್ನು ಅಭಿವ್ಯಕ್ತಿಗೊಳಿಸಲು ಶಿಕ್ಷಕರ ಕಲ್ಯಾಣ ನಿಧಿಯು ಉತ್ತಮ ಅವಕಾಶ ಕಲ್ಪಿಸಿದೆ. ಸ್ಪರ್ಧೆಗಳಲ್ಲಿ ಭಾಗವಹಿಸುವ ಮೂಲಕ ಶಿಕ್ಷಕರು ತಮ್ಮ ಶಾಲೆಗಳಲ್ಲೂ ವಿವಿಧ ಸಹಪಠ್ಯ ಚಟುವಟಿಕೆಗಳನ್ನು ಏರ್ಪಡಿಸುವ ಸಾಮರ್ಥ್ಯ ಹೊಂದಲಿ. ಶಿಕ್ಷಕರು ಇಂತಹ ಕಾರ್ಯಕ್ರಮಗಳ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದ ನೋಡಲ್ ಅಧಿಕಾರಿ ಆನಂದ ಹುಣಸಗಿ ಪ್ರಾಸ್ತಾವಿಕ ಮಾತನಾಡಿ, ಶಿಕ್ಷಕರ ಪ್ರತಿಭೆಯು ಬದುಕಿನ ಒತ್ತಡದ ನಡುವೆ ಕಮರಿ ಹೋಗಬಾರದು. ಅದು ಶಾಲೆಯಲ್ಲಿ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ದಾರಿ ತೋರಬೇಕು. ಭವಿಷ್ಯದ ಪ್ರಜೆಗಳನ್ನು ರೂಪಿಸುವ ಹೊಣೆ ಹೊತ್ತಿರುವ ಶಿಕ್ಷಕರು ತಮ್ಮ ಪ್ರತಿಭೆ ಹೊರ ಪ್ರಪಂಚಕ್ಕೆ ಹರಿಯುವಂತೆ ಮಾಡಬೇಕು. ಶೈಕ್ಷಣಿಕವಾಗಿ ಹಿಂದುಳಿದ ಮಕ್ಕಳಲ್ಲೂ ವಿವಿಧ ಪ್ರತಿಭೆಗಳಿರುವ ಕಾರಣ ಆ ಮಕ್ಕಳಿಗೆ ಪ್ರೋತ್ಸಾಹ ನೀಡಿ ಜೀವ ತುಂಬಬೇಕು ಎಂದು ಹೇಳುತ್ತಾ ಸ್ಪರ್ಧೆಯ ನಿಯಮಗಳನ್ನು ತಿಳಿಸಿದರು.
ಎಲ್ಲ ಸ್ಪರ್ಧೆಯ ವಿಜೇತರಿಗೆ ಪ್ರಶಸ್ತಿ ಪತ್ರ ನೀಡಲಾಯಿತು.
ಶಿಕ್ಷಣ ಸಂಯೋಜಕರಾದ ಎನ್ ಪಿ ಪೂಜಾರಿ, ಆರ್ ಪಿ ಮಿಸಾಳೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ರವಿ ಗಿಣ್ಣಿ, ಪ್ರೌಢ ಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಟಿ ಎಸ್ ಹೊಸಮನಿ, ಸಹಶಿಕ್ಷಕರ ಸಂಘದ ಅಧ್ಯಕ್ಷ ಅಣ್ಣಾರಾಯ ಬಿರಾದಾರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಟಿ ಕೆ ಜಂಬಗಿ, ಸಂಘಟನಾ ಕಾರ್ಯದರ್ಶಿ ಟಿ ಕೆ ಪೂಜಾರಿ, ಕಚೇರಿ ಅಧೀಕ್ಷಕ ಸಿ ಎಂ ಹಿರೇಮಠ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಶಿಕ್ಷಕ ಪರಶುರಾಮ ತಳವಾರ ನಿರೂಪಿಸಿದರು. ಶಿಕ್ಷಕ ವೈ ಜಿ ಬಿರಾದಾರ ಸ್ವಾಗತಿಸಿದರು. ರವಿ ಬಿರಾದಾರ ವಂದಿಸಿದರು.

