ವಿಜಯಪುರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ನ್ಯಾಯಮೂರ್ತಿ ಹರೀಶ ಎ. ಅಭಿಮತ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸಮಾಜದ ಪ್ರತಿಯೊಬ್ಬರೂ ಕಾನೂನಿನ ಅರಿವು ಹೊಂದಿರಬೇಕು. ಪ್ರತಿಯೊಬ್ಬರಿಗೂ ಉಚಿತ ಕಾನೂನು ನೆರವು ಪಡೆಯುವ ಹಕ್ಕಿದೆ. ಕಾನೂನು ಸೇವೆಗಳ ಪ್ರಾಧಿಕಾರದ ಮೂಲಕ ದೊರೆಯುವ ಸೌಲಭ್ಯಗಳ ಕುರಿತು ಸಾರ್ವಜನಿಕರು ತಿಳಿದುಕೊಂಡು ಸದುಪಯೋಗಪಡಿಸಿಕೊಳ್ಳಬೇಕು ಎಂದು ವಿಜಯಪುರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾಯಮೂರ್ತಿ ಹರೀಶ ಎ. ಹೇಳಿದರು.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ವಿಜಯಪುರ, ತಾಲೂಕು ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ತಾಲೂಕು ಪಂಚಾಯತ್ ಮುದ್ದೇಬಿಹಾಳ, ಗ್ರಾಮ ಪಂಚಾಯತ್ ಬಿದರಕುಂದಿ ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಸಹಯೋಗದಲ್ಲಿ ಮೆಗಾ ಡ್ರೈವ್ ಫೇಸ್-I (ಪಾರ್ಟ್-II) ಅಡಿಯಲ್ಲಿ ನ.೨೪ರಂದು ಆಯೋಜಿಸಿದ್ದ ಉಚಿತ ಕಾನೂನು ನೆರವು ಮತ್ತು ಕಾನೂನು ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಮಹಿಳೆಯರ ಹಕ್ಕುಗಳು ಮತ್ತು ಸಬಲೀಕರಣ, ಬಾಲ್ಯವಿವಾಹ ನಿಷೇಧ, ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ತಡೆ ಕುರಿತು ಅರಿವು ಮೂಡಿಸಲಾಯಿತು. ಹಿರಿಯ ನಾಗರಿಕರ ಹಕ್ಕುಗಳು ಮತ್ತು ರಕ್ಷಣೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಹಕ್ಕುಗಳು, ಕಾರ್ಮಿಕರ ಹಕ್ಕುಗಳು ಹಾಗೂ ಅವರಿಗೆ ದೊರೆಯುವ ಸರ್ಕಾರಿ ಸೌಲಭ್ಯಗಳ ಕುರಿತು ಮಾಹಿತಿ ನೀಡಲಾಯಿತು.
ವಿಶೇಷ ಚೇತನರ ಹಕ್ಕುಗಳು ಮತ್ತು ಸೌಲಭ್ಯಗಳು, ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ, ಸೈಬರ್ ಅಪರಾಧಗಳಿಂದ ರಕ್ಷಣೆ, ಮೋಟಾರು ವಾಹನ ಅಪಘಾತ ಪರಿಹಾರ ಪಡೆಯುವ ವಿಧಾನ ಹಾಗೂ ಕಾನೂನು ನೆರವಿನ ಕುರಿತು ತಿಳಿಸಲಾಯಿತು.ಲೋಕ ಅದಾಲತ್ ಮತ್ತು ರಾಜಿ ಸಂಧಾನದ ಮಹತ್ವ, ಗ್ರಾಹಕರ ಹಕ್ಕುಗಳು ಹಾಗೂ ಗ್ರಾಹಕ ಸಂರಕ್ಷಣಾ ಕಾಯ್ದೆ, ಎಲ್ಲರಿಗೂ ನ್ಯಾಯದ ಲಭ್ಯತೆ,ಉಚಿತ ಕಾನೂನು ನೆರವು ಮತ್ತು ವಿವಿಧ ಸರ್ಕಾರಿ ಕಲ್ಯಾಣ ಯೋಜನೆಗಳ ಬಗ್ಗೆಯೂ ಅರಿವು ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಎಸ್. ಹಾಗರಗಿ, ಮುದ್ದೇಬಿಹಾಳ ಹಿರಿಯ ಸಿವಿಲ್ ನ್ಯಾಯಾಧೀಶ ರವೀಂದ್ರಕುಮಾರ ಬಿ. ಕಟ್ಟಿಮನಿ, ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿಯ ಸದಸ್ಯ ಕಾರ್ಯದರ್ಶಿ ರಾಮಮೂರ್ತಿ ಎನ್
ಮುದ್ದೇಬಿಹಾಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸಂಗನಗೌಡ ಬಿರಾದಾರ ಮತ್ತು ಮುದ್ದೇಬಿಹಾಳ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಸಿ. ಮಾಲಗತ್ತಿ ಉಪಸ್ಥಿತರಿದ್ದರು.

