ಜಿ.ಪಂ. ಸಿಇಒ ಆನಂದ ಪ್ರಕಾಶ್ ಮೀನಾ ಬ್ಯಾಂಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಬ್ಯಾಂಕ್ಗಳಿಗೆ ವಿವಿಧ ಸಾಲ ಸೌಲಭ್ಯಗಳಿಗಾಗಿ ಅರ್ಜಿ ಸಲ್ಲಿಸುವ ಗ್ರಾಹಕರೊಂದಿಗೆ ಬ್ಯಾಂಕ್ ಅಧಿಕಾರಿಗಳು ಸೌಜನ್ಯ ಹಾಗೂ ಸಹಾನುಭೂತಿಯಿಂದ ನಡೆದುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ ಪ್ರಕಾಶ್ ಮೀನಾ ಅವರು ಬ್ಯಾಂಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಬುಧವಾರ ಜಿಲ್ಲಾ ಅಗ್ರಗಣ್ಯ ಬ್ಯಾಂಕ್ ವತಿಯಿಂದ ಆಯೋಜಿಸಿದ್ದ ತ್ರೈಮಾಸಿಕ ಜಿಲ್ಲಾ ಸಮಾಲೋಚನಾ ಸಮಿತಿ ಹಾಗೂ ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಬ್ಯಾಂಕ್ಗಳಿಗೆ ಬರುವ ಗ್ರಾಹಕರಿಗೆ ಸೂಕ್ತ ಸ್ಪಂದನೆ ನೀಡಬೇಕು. ಅವರೊಂದಿಗೆ ಯಾವಾಗಲೂ ಸಕಾರಾತ್ಮಕ ಮನೋಭಾವದಿಂದ ನಡೆದುಕೊಳ್ಳಬೇಕು. ಭಾರತೀಯ ರಿಸರ್ವ್ ಬ್ಯಾಂಕ್ನ ಮಾರ್ಗಸೂಚಿಗಳನ್ವಯ ಬ್ಯಾಂಕ್ಗಳ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳ ಕುರಿತು ಗ್ರಾಹಕರಿಗೆ ಅರಿವು ಮೂಡಿಸಿ, ಅಗತ್ಯ ಮಾರ್ಗದರ್ಶನ ನೀಡಬೇಕು. ಸಾಲಕ್ಕಾಗಿ ಅರ್ಜಿ ಸಲ್ಲಿಸಿದವರ ದಾಖಲೆಗಳು ಅಪೂರ್ಣವಾಗಿದ್ದರೆ, ಯಾವ ದಾಖಲೆಗಳನ್ನು ಸಲ್ಲಿಸಬೇಕು ಎಂಬುದನ್ನು ಸ್ಪಷ್ಟವಾಗಿ ತಿಳಿಸಬೇಕು. ಯಾವುದೇ ಅರ್ಜಿಯನ್ನು ಅನಗತ್ಯವಾಗಿ ಬಾಕಿ ಉಳಿಸಿಕೊಳ್ಳದೆ ನಿಗದಿತ ಸಮಯದಲ್ಲಿ ವಿಲೇವಾರಿ ಮಾಡಬೇಕು ಎಂದು ಸೂಚಿಸಿದರು.
ವಿವಿಧ ಇಲಾಖೆಗಳು ಹಾಗೂ ಅಭಿವೃದ್ಧಿ ನಿಗಮಗಳ ಮೂಲಕ ಅನುಷ್ಠಾನಗೊಳ್ಳುತ್ತಿರುವ ಸಾಲ ಮತ್ತು ಸ್ವಯಂ ಉದ್ಯೋಗ ಯೋಜನೆಗಳಡಿ ಅನೇಕ ಅರ್ಹ ಫಲಾನುಭವಿಗಳು ಬ್ಯಾಂಕ್ಗಳಿಗೆ ಅರ್ಜಿ ಸಲ್ಲಿಸಿದ್ದಾರೆ. ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉದ್ಯೋಗಿನಿ ಯೋಜನೆ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಸ್ವಾವಲಂಬಿ ಸಾರಥಿ ಯೋಜನೆ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಸ್ವಾವಲಂಬಿ ಟ್ಯಾಕ್ಸಿ, ಗೂಡ್ಸ್ ವಾಹನ ಹಾಗೂ ಆಟೋ ರಿಕ್ಷಾ ಯೋಜನೆಗಳು, ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಯೋಜನೆಗಳು, ಪ್ರಧಾನಮಂತ್ರಿ ಉದ್ಯೋಗ ಸೃಷ್ಟಿ ಕಾರ್ಯಕ್ರಮ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಉದ್ಯಮಶೀಲತೆ ಮತ್ತು ಸ್ವಾವಲಂಬಿ ಸಾರಥಿ ಯೋಜನೆಗಳಡಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ತ್ವರಿತವಾಗಿ ಪರಿಶೀಲಿಸಬೇಕು ಎಂದರು.
ಅದೇ ರೀತಿ ಪ್ರಧಾನಮಂತ್ರಿ ಆವಾಸ್ ಯೋಜನೆ ನಗರ, ಕೃಷಿ ಇಲಾಖೆಯ ಪ್ರಧಾನಮಂತ್ರಿ ಸೂಕ್ಷ್ಮ ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರಿಕೀಕರಣ ಯೋಜನೆ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಯೋಜನೆಗಳು, ಹೆಸ್ಕಾಂ ಇಲಾಖೆಯ ಪ್ರಧಾನಮಂತ್ರಿ ಸೂರ್ಯ ಘರ್,ಮುಫ್ತ್ ಬಿಜ್ಲಿ ಯೋಜನೆ, ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ, ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆ ಹಾಗೂ ಅಟಲ್ ಪಿಂಚಣಿ ಯೋಜನೆಗಳಡಿ ಅರ್ಹ ಫಲಾನುಭವಿಗಳಿಗೆ ಸಕಾಲದಲ್ಲಿ ಸೌಲಭ್ಯ ಕಲ್ಪಿಸಬೇಕು ಎಂದು ತಿಳಿಸಿದರು.
ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಸಲ್ಲಿಕೆಯಾಗಿರುವ ಅರ್ಜಿಗಳು ಇನ್ನೂ ಬಾಕಿ ಉಳಿದಿರುವುದು ಗಮನಕ್ಕೆ ಬಂದಿದೆ. ಸಂಬಂಧಪಟ್ಟ ಬ್ಯಾಂಕ್ ವ್ಯವಸ್ಥಾಪಕರು ಬಾಕಿ ಅರ್ಜಿಗಳನ್ನು ಪರಿಶೀಲಿಸಿ ಒಂದು ಬೇಗ ಸಂಪೂರ್ಣವಾಗಿ ವಿಲೇವಾರಿ ಮಾಡಬೇಕು. ಅರ್ಹ ಫಲಾನುಭವಿಗಳಿಗೆ ನಿಗದಿತ ಸಮಯದಲ್ಲಿ ಸಾಲ ಸೌಲಭ್ಯ ಒದಗಿಸುವಲ್ಲಿ ನಿರ್ಲಕ್ಷ್ಯ ಅಥವಾ ವಿಳಂಬ ಕಂಡುಬಂದಲ್ಲಿ ಸಂಬಂಧಪಟ್ಟ ಬ್ಯಾಂಕ್ ವ್ಯವಸ್ಥಾಪಕರ ವಿರುದ್ಧ ಶ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಅಗ್ರಗಣ್ಯ ಬ್ಯಾಂಕ್ ವ್ಯವಸ್ಥಾಪಕ ಬಿ. ಸಿದ್ದಯ್ಯ, ನಬಾರ್ಡ್ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕ ವಿಕಾಸ ರಾಠೋಡ, ಭಾರತೀಯ ರಿಸರ್ವ್ ಬ್ಯಾಂಕ್ನ ಸಹಾಯಕ ಮಹಾಪ್ರಬಂಧಕ ಶರವಣನ್, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

