ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಜಯಪುರದ ಕಲೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಆಯೋಜಿಸಿರುವ ಪಾರಂಪರಿಕ ನಡಿಗೆ ವಿಶೇಷ ಮಹತ್ವ ಹೊಂದಿದೆ ಎಂದು ಕನ್ನಡ ವಿಭಾಗದ ಹಿರಿಯ ಪ್ರಾಧ್ಯಾಪಕ ಡಾ. ಮಹೇಶ ಚಿಂತಾಮಣಿ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಇತಿಹಾಸ ವಿಭಾಗ ಹಾಗೂ ಪ್ರವಾಸೋದ್ಯಮ ಇಲಾಖೆ, ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಸಹಯೋಗದಲ್ಲಿ ನ.೨೪ರಂದು ಬೆಳಿಗ್ಗೆ ೧೧ ಗಂಟೆಗೆ ವಿಶ್ವವಿದ್ಯಾನಿಲಯದ ಆವರಣದಿಂದ ಸಂಗೀತ ಮಹಲ್ವರೆಗೆ ಹಮ್ಮಿಕೊಂಡಿದ್ದ ವಿಶ್ವ ಪರಂಪರಾ ಸಪ್ತಾಹದ ಅಂಗವಾಗಿ ಪಾರಂಪರಿಕ ನಡಿಗೆ (ಜಾಥಾ) ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಅರವಿಂದ ಹೂಗಾರ ಮಾತನಾಡಿ, ಐತಿಹಾಸಿಕ ಸ್ಮಾರಕಗಳನ್ನು ಸಂರಕ್ಷಿಸುವ ಹಾಗೂ ಅವುಗಳ ಮಹತ್ವವನ್ನು ಕಾಪಾಡುವ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಅಗತ್ಯವಿದೆ ಎಂದರು.
ಸಾಮಾಜಿಕ ಹೋರಾಟಗಾರ ಪೀಟರ್ ಅಲೆಕ್ಸಾಂಡರ್ ಮಾತನಾಡಿ, ವಿಜಯಪುರ ನಗರವು ವಿಶ್ವ ಪರಂಪರೆಯ ಪಟ್ಟಿಗೆ ಸೇರುವ ಎಲ್ಲ ಅರ್ಹತೆಗಳನ್ನು ಹೊಂದಿದೆ. ಈ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿ ಅಮೀನ ಹುಲ್ಲೂರ ಮಾತನಾಡಿ, ವಿಜಯಪುರ ನಗರವು ಕೋಮುಸಾಮರಸ್ಯಕ್ಕೆ ಹೆಸರಾಗಿದೆ. ಎರಡನೇ ಇಬ್ರಾಹಿಂ ಆದಿಲ್ಶಾಹಿ ಕಲೆ, ವಾಸ್ತುಶಿಲ್ಪ ಹಾಗೂ ಸಂಗೀತ ಕ್ಷೇತ್ರಗಳಿಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪ್ರವಾಸೋದ್ಯಮ ಇಲಾಖೆಯ ಸಮಾಲೋಚಕ ಅನೀಲ, ಉಪನ್ಯಾಸಕರಾದ ಗುರುರಾಜ ಬಮ್ಮನಹಳ್ಳಿ, ಡಾ. ಎಂ.ಎಸ್. ಮುಜಾವರ, ಡಾ. ಚಂದ್ರಕಲಾ ಹಳ್ಳಿ, ಅಶೋಕ ಈ. ಮಲಾಬಾದಿ ಸೇರಿದಂತೆ ನೂರಾರು ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
ವಿಶ್ವ ಪರಂಪರಾ ಸಪ್ತಾಹದ ಅಂಗವಾಗಿ ವಿಜಯಪುರದ ಕಲೆ ಮತ್ತು ಪರಂಪರೆಯ ಕುರಿತು ರಸಪ್ರಶ್ನೆ, ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಗಳನ್ನೂ ಆಯೋಜಿಸಲಾಗಿತ್ತು.

