ರೇವತಗಾಂವ ಸರ್ಕಾರಿ ಶಾಲೆಯಲ್ಲಿ ಸಂವಿಧಾನ ದಿನ ಆಚರಣೆ | ಪ್ರತಿಜ್ಞಾ ವಿಧಿ ಬೋಧನೆ
ಉದಯರಶ್ಮಿ ದಿನಪತ್ರಿಕೆ
ಚಡಚಣ: ನಮ್ಮ ಸಂವಿಧಾನ ದೇಶದ ಜನರನ್ನು ಸಶಕ್ತಗೊಳಿಸಿದೆ. ಸರ್ವರಿಗೂ ಸಮಾನತೆಯೊದಗಿಸಿದೆ. ಮೂಲಭೂತ ಹಕ್ಕುಗಳು, ಕರ್ತವ್ಯವನ್ನೂ ನೀಡಿದೆ. ಭಾರತಕ್ಕೆ ಸಂವಿಧಾನವೇ ದೊಡ್ಡ ಬಲ. ನಮ್ಮ ಸಂವಿಧಾನವು ನಮ್ಮೆಲ್ಲರನ್ನು ರಕ್ಷಿಸುವ ಬಹುದೊಡ್ಡ ಕಾನೂನು ಎಂದು ಮುಖ್ಯ ಗುರು ಆರ್.ಎನ್.ಹತ್ತಳ್ಳಿಯವರು ಹೇಳಿದರು.
ಗುರುವಾರದಂದು ರೇವತಗಾಂವ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ‘ಸಂವಿಧಾನ ದಿನಾಚರಣೆ’ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು. ನಮ್ಮ ದೇಶದಲ್ಲಿ ಹೊಸ ಶಕೆ ಆರಂಭವಾಗಿದ್ದು ಸಂವಿಧಾನ ಜಾರಿಗೆ ಬಂದಾಗಿನಿಂದಲೇ ಸಂವಿಧಾನದ ಮಹತ್ವದ ವಗ್ಗೆ ಎಲ್ಲರಿಗೂ ಅರಿವು ಮೂಡಿಸುವುದು, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವುದರ ಜತೆಗೆ ಅವರ ಸಾಧನೆಯ ಬಗ್ಗೆ ತಿಳಿಸಿ ಕೊಡುವುದು ಈ ದಿನದ ವಿಶೇಷತೆ. ಭಾರತ ಸಂವಿಧಾನಕ್ಕೆ ವಿಶ್ವದಲ್ಲೇ ದೊಡ್ಡ ಸಂವಿಧಾನ ಎಂಬ ಹಿರಿಮೆ ಇದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಂವಿಧಾನದ ಪ್ರತಿಜ್ಞಾ ವಿಧಿಯನ್ನು ಎಸ್.ಡಿ.ಆದಿಗೊಂಡೆಯವರು ಶಿಕ್ಷಕ ಮತ್ತು ವಿದ್ಯಾರ್ಥಿಗಳಿಗೆ ಬೋಧಿಸಿದರು.
ಈ ವೇಳೆ ಶಿಕ್ಷಕರಾದ ಬಸವರಾಜ ಪೂಜಾರಿ. ಎಂ.ಕೆ.ಬಗಲಿ, ಪಿ.ಎ.ವಾಲಿಕಾರ, ಎ.ಎಚ್.ಬಗಲಿ, ಎನ್.ಎಸ್.ಘೋಡೇಸವಾರ, ಹೀನಾ ಸೈಯದ, ಮೌನೇಶ ಸುತಾರ, ಭಾಗ್ಯಶ್ರೀ ಪೂಜಾರಿ, ಸೀಮಾ ಪಾಟೀಲ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

