ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ನೀಡಿರುವ ಉಳಿತಾಯ, ಆರ್ಥಿಕ ಶಿಸ್ತು ಹಾಗೂ ಉತ್ತಮ ಜೀವನಶೈಲಿಯನ್ನು ಅಳವಡಿಸಿಕೊಳ್ಳುವ ಮಹತ್ವದ ಸಂದೇಶವನ್ನು ವಿಜಯಪುರ ಲೋಕಸಭಾ ಸಂಸದ ರಮೇಶ ಜಿಗಜಿಣಗಿ ಅವರು ಬೆಂಬಲಿಸಿದ್ದಾರೆ.
ದೇಶದ ಪ್ರತಿಯೊಬ್ಬ ನಾಗರಿಕರು ದುಂದುವೆಚ್ಚಕ್ಕೆ ಕಡಿವಾಣ ಹಾಕಿ, ಉಳಿತಾಯದ ಮನೋಭಾವ ಬೆಳೆಸಿಕೊಳ್ಳುವುದು ಇಂದಿನ ಅಗತ್ಯವಾಗಿದೆ. ಕುಟುಂಬದ ಆರ್ಥಿಕ ಭದ್ರತೆ ಹಾಗೂ ಭವಿಷ್ಯದ ದೃಷ್ಟಿಯಿಂದ ಉಳಿತಾಯ ಅತ್ಯಂತ ಮುಖ್ಯವಾಗಿದೆ. ಪ್ರಧಾನಿ ಮೋದಿ ಅವರು ನೀಡಿರುವ ಈ ಸಂದೇಶ ಜನಸಾಮಾನ್ಯರಿಗೆ ಉತ್ತಮ ಮಾರ್ಗದರ್ಶನವಾಗಿದೆ.
ಕಳೆದ ವರ್ಷಗಳಲ್ಲಿ ದೇಶದಲ್ಲಿ ಬಡತನ ನಿರ್ಮೂಲನೆ ಹಾಗೂ ಜನರ ಆರ್ಥಿಕ ಸಬಲೀಕರಣಕ್ಕಾಗಿ ಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿದೆ. 2011ರಿಂದ 2023ರ ಅವಧಿಯಲ್ಲಿ ಸುಮಾರು 50 ಕೋಟಿ ಜನರು ಬಡತನದಿಂದ ಹೊರಬಂದಿರುವುದು ಮಹತ್ವದ ಬೆಳವಣಿಗೆಯಾಗಿದೆ.
ಅದೇ ರೀತಿ ಯುವಜನತೆ ಮಾದಕ ವ್ಯಸನಗಳಿಂದ ದೂರವಿದ್ದು, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು. ದೇಶದ ಭವಿಷ್ಯವಾಗಿರುವ ಯುವಶಕ್ತಿಯನ್ನು ಸರಿಯಾದ ದಾರಿಯಲ್ಲಿ ಮುನ್ನಡೆಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಈ ಸಂದೇಶವನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು, ಆರ್ಥಿಕವಾಗಿ ಸದೃಢ ಹಾಗೂ ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಸಂಸದ ರಮೇಶ ಜಿಗಜಿಣಗಿ ತಿಳಿಸಿದ್ದಾರೆ.

