ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಭಕ್ತಿ ಪರಂಪರೆಯಲ್ಲಿ ವಿಶಿಷ್ಟ ಸ್ಥಾನ ಹೊಂದಿರುವ ಕನಕದಾಸರು ಭಕ್ತಿ, ಮಾನವೀಯತೆ ಮತ್ತು ಸಮಾನತೆಯ ಮೌಲ್ಯಗಳನ್ನು ತಮ್ಮ ಬದುಕು ಹಾಗೂ ಸಾಹಿತ್ಯದ ಮೂಲಕ ಸಮಾಜಕ್ಕೆ ಪರಿಚಯಿಸಿದ ಮಹಾನ್ ಚೇತನರು. ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಹೇಳಿದರು.
ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಭಕ್ತಶ್ರೇಷ್ಠ ಕನಕದಾಸರ ಜಯಂತಿ ಕಾರ್ಯಕ್ರಮಕ್ಕೆ ಪಾಲ್ಗೊಂಡು ಅವರು ಮಾತನಾಡಿದರು.
ಕನಕದಾಸರು ಭಕ್ತಿ ಮತ್ತು ಮಾನವೀಯತೆಯ ಸಮ್ಮಿಲನವಾಗಿದ್ದು, ಅವರ ವ್ಯಕ್ತಿತ್ವದಲ್ಲಿ ದೈವಿಕ ಚಿಂತನೆ ಹಾಗೂ ಮಾನವತಾವಾದದ ಉನ್ನತ ಮೌಲ್ಯಗಳು ಮೇಳೈಸಿವೆ. ದೇವರ ಭಕ್ತಿಯೊಂದಿಗೆ ಮನುಕುಲದ ಒಳಿತನ್ನು ಬಯಸಿದ ಅವರು, ಸಮಾಜಕ್ಕೆ ಆದರ್ಶಪ್ರಾಯವಾದ ಜೀವನ ನಡೆಸಿದ್ದಾರೆ. ಇಂತಹ ಮಹಾನ್ ಚೇತನರ ಜಯಂತಿ ಆಚರಣೆಯಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ನಮ್ಮೆಲ್ಲರ ಸೌಭಾಗ್ಯವಾಗಿದೆ ಎಂದರು.
ಉಪನ್ಯಾಸಕ ದಳವಾಯಿ ಅವರು, ಕನಕದಾಸರು ತಮ್ಮ ಸಾಹಿತ್ಯ ಮತ್ತು ಕೀರ್ತನೆಗಳ ಮೂಲಕ ಜಾತಿ ವ್ಯವಸ್ಥೆ ಹಾಗೂ ಸಾಮಾಜಿಕ ಅಸಮಾನತೆಗಳನ್ನು ಪ್ರಶ್ನಿಸಿ, ಸಮಾನತೆ, ಮಾನವೀಯತೆ ಮತ್ತು ಭಕ್ತಿಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ಸಂತರು. ಅವರ ವಿಚಾರಧಾರೆಗಳು ಇಂದಿನ ಸಮಾಜಕ್ಕೂ ಪ್ರಸ್ತುತವಾಗಿವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮೇಯರ್ ಮಡಿವಾಳಪ್ಪ ಕರಡಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಸಂತ ಹೊನಮೊಡೆ, ಪಾಲಿಕೆ ಸದಸ್ಯರಾದ ಪ್ರೇಮಾನಂದ ಬಿರಾದಾರ, ರಾಹುಲ್ ಜಾಧವ, ಮುಖ್ಯ ಯೋಜನಾಧಿಕಾರಿ ಸಿ.ಬಿ. ಕುಂಬಾರ, ಡಿವೈಎಸ್ಪಿ ಉಪಾಸೆ,ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಹನುಮಂತ ಕಾಲತೀಪಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಕ್ರೀಡಾಧಿಕಾರಿ ರಾಜಶೇಖರ ದೈವಾಡಿ, ಜವಾಹರ ಗೋಸ್ವಾಮಿ, ಸೋಮನಗೌಡ ಕಲ್ಲೂರ ಹಾಗೂ ಗಿರೀಶ ಕುಲಕರ್ಣಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಮತ್ತು ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕನಕದಾಸರ ಭಾವಚಿತ್ರದ ಮೆರವಣಿಗೆ
ಕಾರ್ಯಕ್ರಮಕ್ಕೂ ಮೊದಲು ಭಕ್ತಶ್ರೇಷ್ಠ ಕನಕದಾಸರ ಭಾವಚಿತ್ರದ ಮೆರವಣಿಗೆಯು ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಿಂದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದವರೆಗೆ ಜರುಗಿತು.

