ಪ್ರಧಾನ ಜಿಲ್ಲಾ ನ್ಯಾಯಾಧೀಶ ಹರೀಶ. ಎ ಅಭಿಮತ | ಬಿದರಕುಂದಿಯಲ್ಲಿ ಉಚಿತ ಕಾನೂನು ನೆರವು ಕೇಂದ್ರ ಉದ್ಘಾಟನೆ
ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ಆರ್ಥಿಕ ಸಂಕಷ್ಟ ಅಥವಾ ಕಾನೂನು ಅರಿವಿನ ಕೊರತೆಯಿಂದಾಗಿ ಗ್ರಾಮೀಣ ಭಾಗದ ಯಾವುದೇ ವ್ಯಕ್ತಿ ನ್ಯಾಯದಿಂದ ವಂಚಿತರಾಗಬಾರದು ಎಂಬ ಮಹತ್ತರ ಉದ್ದೇಶದಿಂದ ಗ್ರಾಮ ಮಟ್ಟದಲ್ಲೇ ಉಚಿತ ಕಾನೂನು ನೆರವು ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ ಎಂದು ವಿಜಯಪುರದ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಹರೀಶ. ಎ ಹೇಳಿದರು.
ತಾಲ್ಲೂಕಿನ ಬಿದರಕುಂದಿ ಗ್ರಾಮ ಪಂಚಾಯತ್ ಆವರಣದಲ್ಲಿ ಕಾನೂನುಸೇವೆಗಳ ಪ್ರಾಧಿಕಾರ, ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ತಾಲೂಕಾ ಪಂಚಾಯತ್, ಗ್ರಾಮ ಪಂಚಾಯತ್ ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಉಚಿತ ಕಾನೂನು ನೆರವು ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮೀಣ ಜನರು ಸಣ್ಣಪುಟ್ಟ ವ್ಯಾಜ್ಯಗಳಿಗೆ ನ್ಯಾಯಾಲಯಗಳಿಗೆ ಅಲೆದಾಡಿ ಸಮಯ ಮತ್ತು ಹಣ ವ್ಯಯ ಮಾಡುವ ಬದಲು, ಸ್ಥಳೀಯವಾಗಿಯೇ ತೆರೆಯಲಾಗಿರುವ ಈ ಕೇಂದ್ರದ ಮೂಲಕ ಉಚಿತ ಕಾನೂನು ಸಲಹೆ ಹಾಗೂ ಮಾರ್ಗದರ್ಶನ ಪಡೆದುಕೊಳ್ಳುವ ಮೂಲಕ ಕೇಂದ್ರದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸಂಗನಗೌಡ ಬಿರಾದಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ವಿಜಯಪುರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಅರವಿಂದ ಹಾಗರಗಿ, ಮುದ್ದೇಬಿಹಾಳದ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ರಾಮಮೂರ್ತಿ. ಎನ್, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ ಅವರು ಅತಿಥಿಗಳಾಗಿ ಭಾಗವಹಿಸಿ, ಕೇಂದ್ರದ ಕಾರ್ಯವೈಖರಿ ಹಾಗೂ ಸಾರ್ವಜನಿಕರಿಗೆ ದೊರೆಯುವ ಉಚಿತ ಕಾನೂನು ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.
ನ್ಯಾಯವಾದಿಗಳಾದ ಪಿ.ಬಿ.ಗೌಡರ, ರವಿ ನಾಲತವಾಡ, ಬಿ.ಪಿ.ಮ್ಯಾಗೇರಿ, ಶ್ರೀಕಾಂತ ಕಡೂರ, ಬಿ.ವಾಯ್.ಮೇಟಿ ಸೇರಿದಂತೆ ಗ್ರಾಮ ಪಂಚಾಯತ್ ಜನಪ್ರತಿನಿಧಿಗಳು, ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳು, ಕಾನೂನು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಇದ್ದರು.

