ಉದಯರಶ್ಮಿ ದಿನಪತ್ರಿಕೆ
ನಿಡಗುಂದಿ: ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಶುಕ್ರವಾರ ಸಂತ ಕನಕದಾಸರ ಜಯಂತಿಯನ್ನು ಆಚರಿಸಲಾಯಿತು.
ಬೆಳಿಗ್ಗೆ ಪಂಚಾಯಿತಿ ಕಾರ್ಯಾಲಯದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಲಾಯಿತು.
ನಂತರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪ್ರತಾಪ ಕೊಡಗೆ ಮಾತನಾಡಿ, ಕನಕದಾಸರು ತಮ್ಮ ಕೀರ್ತನೆಗಳು ಹಾಗೂ ಸಾಹಿತ್ಯದ ಮೂಲಕ ಸಮಾಜಕ್ಕೆ ಭಕ್ತಿ, ಸಮಾನತೆ, ಮಾನವೀಯತೆ ಮತ್ತು ಸಾಮಾಜಿಕ ಸಾಮರಸ್ಯದ ಸಂದೇಶವನ್ನು ಸಾರಿದ ಮಹಾನ್ ದಾಸಶ್ರೇಷ್ಠರಾಗಿದ್ದಾರೆ.
ಜಾತಿ-ಮತಗಳ ಭೇದಭಾವವನ್ನು ಮೀರಿ ಎಲ್ಲರೂ ಸಮಾನರು ಎಂಬ ಸಂದೇಶ ಸಾರಿದ ಅವರ ಚಿಂತನೆಗಳು ಇಂದಿಗೂ ಸಮಾಜಕ್ಕೆ ಪ್ರಸ್ತುತವಾಗಿವೆ. ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಂಬಕ್ಕ ವಿಭೂತಿ, ಉಪಾಧ್ಯಕ್ಷ ಬಸವರಾಜ ವಂದಾಲ, ಸ್ಥಾಯಿ ಸಮಿತಿ ಅಧ್ಯಕ್ಷ ಕರಿಯಪ್ಪ ಸಿಂದಗಿ, ಹಾಲುಮತ ಸಮಾಜದ ಮುಖಂಡರು, ಪಟ್ಟಣ ಪಂಚಾಯಿತಿ ಸದಸ್ಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

