ಗ್ರಾಮ ಅಭಿವೃದ್ದಿ ಸಲಹಾ ಸಮಿತಿ ಸಭೆಯಲ್ಲಿ ಡಿಸಿ ಟಿ.ಭೂಬಾಲನ್ ಸೂಚನೆ
ವಿಜಯಪುರ: ತೆರಿಗೆಯಿಂದ ಬಂದ ಹಣದಲ್ಲಿ ಮಸೂತಿ, ಕೂಡಗಿ, ತೆಲಗಿ ಮುತ್ತಗಿ & ಗೊಳಸಂಗಿಯಲ್ಲಿ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳುವಂತೆ ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರೂ ಆದ ಬಸವನಬಾಗೇವಾಡಿ ಮತಕ್ಷೇತ್ರದ ಶಾಸಕ ಶಿವಾನಂದ ಪಾಟೀಲ ಸೂಚಿಸಿದರು.
ಸೋಮವಾರ ಕೂಡಗಿ ಎನ್‌ಟಿಪಿಸಿ ಸಭಾಭವನದಲ್ಲಿ ನಡೆದ ೧೧ನೇ ಗ್ರಾಮ ಅಭಿವೃದ್ದಿ ಸಲಹಾ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದ ಅವರು, ಇನ್ನೂ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ತೀವ್ರವಾಗಿ ಪೂರ್ಣಗೊಳಿಸಬೇಕು ಹಾಗೂ ಬಾಕಿ ಪ್ರಾರಂಭಿಸದೇ ಇರುವ ಕಾಮಗಾರಿಗಳ ಬಗ್ಗೆ ಒಂದು ವಾರದಲ್ಲಿ ಕ್ರಮ ವಹಿಸಿ ಬಳಕೆ ಪ್ರಮಾಣ ಪತ್ರ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.
ಎನ್‌ಟಿಪಿಸಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳೀಯರನ್ನು ನೇಮಕಾತಿ ಮಾಡಿಕೊಳ್ಳಬೇಕು. ಸವಳು ಜವಳು ಕುರಿತು ಹೈದರಾಬಾದ್ ತಂತ್ರಜ್ಞರ ವರದಿ ಅಂಶ ಪರಿಶೀಲಿಸಿ ಕ್ರಮ ವಹಿಸಬೇಕು. ಬಾಧಿತ ಗ್ರಾಮದ ಗ್ರಾಮಸ್ಥರ ಸಮಸ್ಯೆಗಳ ಪರಿಹಾರಕ್ಕೆ ಸಾರ್ವಜನಿಕ ಸಂಪರ್ಕ ಅಧಿಕಾರಿಗಳನ್ನು ನೇಮಿಸಬೇಕು. ಪುನರವಸತಿ ಮತ್ತು ಪುನರ್ ನಿರ್ಮಾಣದ ಅನುದಾನದಲ್ಲಿ ಆರೋಗ್ಯ ತಾಂತ್ರಿಕ ಶಿಕ್ಷಣಕ್ಕಾಗಿ ಕ್ರೀಯಾ ಯೋಜನೆ ತಯಾರಿಸುವಂತೆ ಅಧಿಕಾರಿಗಳಿಗೆ ಸಭೆಯಲ್ಲಿ ಸೂಚಿಸಲಾಯಿತು.
ಜಿಲ್ಲಾಧಿಕಾರಿ ಟಿ.ಭೂಬಾಲನ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ಕೊಲ್ಹಾರ ತಹಶೀಲ್ದಾರ ಸೇರಿದಂತೆ ತಾಲೂಕಿನ ವಿವಿಧ ಇಲಾಖೆ ಅಧಿಕಾರಿಗಳು, ಎನ್‌ಟಿಪಿಸಿ ಅಧಿಕಾರಿಗಳು, ಗ್ರಾಮ ಪಂಚಾಯತ್ ಅಧ್ಯಕ್ಷರು, ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು, ಸಲಹಾ ಸಮಿತಿ ಸದಸ್ಯರು ಇತರರು ಉಪಸ್ಥಿತರಿದ್ದರು.
ವಿಜಯಪುರ ಉಪವಿಭಾಗಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ ಸ್ವಾಗತಿಸಿದರು.