ಲೂಟಿಗಾಗಿ ಸಿಎಂ-ಡಿಸಿಎಂ ನಡುವೆ ಪೈಪೋಟಿ | ಅಭಿವೃದ್ಧಿ ಕುಂಠಿತ | ಕರ್ನಾಟಕ ಹಾಳಾಗಿದೆ
ಸಂಚಲನ ಮೂಡಿಸಿದ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ
ಬೆಂಗಳೂರು: ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕ ಹಾಳಾಗಿದ್ದು, ತಾವು ಎಷ್ಟು ದಿನ ರಾಜ್ಯದ ಮುಖ್ಯಮಂತ್ರಿಯಾಗಿರುತ್ತೇನೆ ಎಂಬುದು ಸಿದ್ದರಾಮಯ್ಯ ಅವರಿಗೇ ತಿಳಿಯದಂತಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನೀಡಿರುವ ಹೇಳಿಕೆ ಸಂಚಲನ ಮೂಡಿಸಿದೆ.
ಮಧ್ಯಪ್ರದೇಶದ ಖಂಡವಾದಲ್ಲಿ ಭಾನುವಾರ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕೇವಲ ಆರು ತಿಂಗಳ ಹಿಂದೆ ರಚನೆಯಾದ ಕಾಂಗ್ರೆಸ್ ಸರ್ಕಾರವನ್ನು ನೋಡಿದರೆ ಎಲ್ಲವೂ ಗೊತ್ತಾಗುತ್ತದೆ. ಸಿಎಂ ಸಿದ್ದರಾಮಯ್ಯ ಎಷ್ಟು ದಿನ ರಾಜ್ಯಭಾರ ನಡೆಸುತ್ತಾರೋ ಎಂದು ಗೊತ್ತಿಲ್ಲ ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿ ಮುಖ್ಯಮಂತ್ರಿಯ ಮುಂದುವರಿಕೆ ಬಗ್ಗೆಯೇ ಗೊಂದಲಗಳು ಎದ್ದಿದ್ದು, ಅಭಿವೃದ್ಧಿ ಕುಂಠಿತಗೊಂಡಿದೆ. ಅಧಿಕಾರ ಹಿಡಿದಿರುವ ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ಭಾಗಿಯಾದ್ದರಿಂದ ಕರ್ನಾಟಕವನ್ನು ಅವರು ಹಾಳು ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.
ಕಾಂಗ್ರೆಸ್ ಪಕ್ಷ ಎಡವಟ್ಟಿನಿಂದ ಯಾವಾಗೆಲ್ಲಾ ಸರ್ಕಾರ ರಚನೆ ಮಾಡುತ್ತದೋ, ಆಗೆಲ್ಲಾ ಅಧಿಕಾರಕ್ಕೇರಿ ರಾಜ್ಯವನ್ನು ಲೂಟಿ ಮಾಡಲು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ನಡುವೆ ಪೈಪೋಟಿ ಏರ್ಪಡುತ್ತದೆ. ಅಂತಹ ಸುದ್ದಿ ಇದೀಗ ಕರ್ನಾಟಕದಿಂದ ಬರುತ್ತಿದೆ ಎಂದು ವಾಗ್ದಾಳಿ ನಡೆಸಿದ್ದರು.
ರಾಜ್ಯ ಬಿಜೆಪಿ ನಾಯಕರು ಮೊದಲಿನಿಂದಲೂ ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಇರಲ್ಲ ಎಂದು ಹೇಳುತ್ತಾ ಬರುತ್ತಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಖುದ್ದು ಪ್ರಧಾನಿ ಮೋದಿ ಅವರೇ ಸಿದ್ದರಾಮಯ್ಯ ಮುಖ್ಯಮಂತ್ರಿ ಹುದ್ದೆ ಕುರಿತು ಮಾತನಾಡಿರುವುದು ಹಲವು ಅಚ್ಚರಿಗಳಿಗೆ ಕಾರಣವಾಗಿದೆ.