ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ, ಬಿಜೆಪಿ ಶಾಸಕ ಬಿವೈ ವಿಜಯೇಂದ್ರ ಅವರು ತಮ್ಮನ್ನು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಹಾಗೂ ಬಿಜೆಪಿ ನಾಯಕ ಬಿ.ಎಲ್ ಸಂತೋಷ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.
ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ನೇಮಕವಾದ ನಂತರ ಟ್ವೀಟ್ ಮಾಡಿರುವ ವಿಜಯೇಂದ್ರ ಅವರು, ಅಚಲ ವಿಶ್ವಾಸವಿಟ್ಟು ಪಕ್ಷ ಸಂಘಟನೆಯ ಬಹು ದೊಡ್ಡ ಜವಾಬ್ದಾರಿ ವಹಿಸಿದ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಗೃಹ ಸಚಿವ ಅಮಿತ್ ಶಾ ಹಾಗೂ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಲ್ ಸಂತೋಷ್ ಅವರಿಗೆ ತುಂಬು ಹೃದಯದ ಕೃತಜ್ಞತೆಗಳನ್ನು ಅರ್ಪಿಸಿದ್ದಾರೆ.
ಸಂಘದ ಹಾಗೂ ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಸರ್ವರ ನಿರೀಕ್ಷೆ ಹಾಗೂ ಜನರ ಅಪೇಕ್ಷೆಗೆ ಪೂರಕವಾಗಿ ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿಗೆ ಹೊಸ ಚೈತನ್ಯ ತುಂಬಲು ಕಾರ್ಯಕರ್ತರೊಂದಿಗೆ ಕಾರ್ಯಕರ್ತನಾಗಿ ಅಹರ್ನಿಶಿ ದುಡಿಯುವ ಸಂಕಲ್ಪ ತೊಟ್ಟಿರುವೆ. ನಾಡಿನ ಜನರ ಆಶೀರ್ವಾದವೇ ನನಗೆ ಶ್ರೀರಕ್ಷೆ ಎಂದು ವಿಜಯೇಂದ್ರ ಹೇಳಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ ಅವರು, ಹೈಕಮಾಂಡ್ ನನ್ನ ಮೇಲೆ ವಿಶ್ವಾಸವಿಟ್ಟಿದ್ದಕ್ಕೆ ಧನ್ಯವಾದ ಹೇಳುತ್ತೇನೆ. ನನ್ನ ಮುಂದೆ ಲೋಕಸಭೆ ಚುನಾವಣೆ ಇದೆ. ಅದನ್ನು ಸವಾಲಾಗಿ ಸ್ವೀಕರಿಸುತ್ತೇನೆ. ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

