ವಿಜಯಪುರ: ಅತೀಸಾರ ಭೇದಿಯಿಂದ ಉಂಟಾಗುವ ಸಾವಿನ ಪ್ರಮಾಣ ಶೂನ್ಯಕ್ಕೆ ತರಲು ೫ ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಅತೀಸಾರ ಭೇದಿಗೆ ಒಳಗಾಗಬಾರದು ಎಂಬ ಉದ್ದೇಶದಿಂದ ತೀವ್ರಗೊಂಡ ಅತೀಸಾರ ಬೇಧಿ ನಿಯಂತ್ರಣ ಪಾಕ್ಷಿಕ (ಐಡಿಸಿಎಫ್) ಕಾರ್ಯಕ್ರಮ ಅನುಷ್ಟಾನ ಮಾಡಲಾಗುತ್ತಿದೆ. ಇಲಾಖೆಯ ವೈದ್ಯಾಧಿಕಾರಿಗಳು ನರ್ಸಿಂಗ್ ಅಧಿಕಾರಿಗಳು ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ನೀಡಿ, ಅತೀಸಾರ ಬೇಧಿಯಿಂದಾಗುವ ಸಾವಿನ ಪ್ರಮಾಣ ಶೂನ್ಯಕ್ಕೆ ತರಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಆಸ್ಪತ್ರೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ ತೀವ್ರತರ ಅತೀಸಾರ ನಿಯಂತ್ರಣ ಪಾಕ್ಷಿಕ, ರಾಷ್ಟ್ರೀಯ ನವಜಾತ ಶಿಶು ಸಪ್ತಾಹ ಹಾಗೂ ನ್ಯುಮೋನಿಯಾವನ್ನು ಯಶಸ್ವಿಯಾಗಿ ಕೊನೆಗೊಳಿಸಲು ಸಾಮಾಜಿಕ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನ್ಯುಮೋನಿಯಾವನ್ನು ಯಶಸ್ವಿಯಾಗಿ ಕೊನೆಗೊಳಿಸಲು ಸಾಮಾಜಿಕ ಜಾಗೃತಿ ಮತ್ತು ಕ್ರಿಯೆ ಕಾರ್ಯಕ್ರಮದ ಬಗ್ಗೆ ಆಶಾ ಮತ್ತು ಪಿ.ಹೆಚ್.ಸಿ.ಓ ಅವರು ಮನೆ ಮನೆಗೆ ತೆರಳಿ ನ್ಯೂಮೊನಿಯಾ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಸಾರ್ವಜನಿಕರು ತಮ್ಮ ಮಕ್ಕಳಲ್ಲಿ ಶ್ವಾಸಕೋಶದ ಸೋಂಕು, ಕಫ ಗಟ್ಟುವಿಕೆಯ ಲಕ್ಷಣಗಳು ಕಂಡು ಬಂದರೆ ಸಮೀಪದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಉಚಿತ ಚಿಕಿತ್ಸೆ ಪಡೆಯಬೇಕು ಎಂದು ತಿಳಿಸಿದರು.
ಜಿಲ್ಲಾ ಶಸ್ತ್ರಚಿಕಿತ್ಸಕರು ಮಾತನಾಡಿ, ನವಜಾತ ಶಿಶು ಕಾರ್ಯಕ್ರಮ ಬಹು ಮುಖ್ಯವಾದದ್ದು, ಶಿಶು ಮರಣ ದರ ಕಡಿಮೆ ಮಾಡಲು ಇದೊಂದು ಪ್ರಮುಖ ಅಸ್ತ್ರವಾಗಿದೆ. ಬಾಲ್ಯದಿಂದ ೭ ದಿನದೊಳಗಾಗಿ ನವಜಾತ ಶಿಶುಗಳಿಗೆ ತೊಂದರೆಯಾದರೆ ತಕ್ಷಣ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಕೆ.ಡಿ.ಗುಂಡಬಾವಡಿ ಅವರು ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಸ್ಥಾನಿಕ ವೈದ್ಯಾಧಿಕಾರಿ ಡಾ. ಇಕಲು ರಾಠೋಡ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಆರ್.ಎಸ್. ಪಾಟೀಲ, ತಾಲೂಕಾ ಆರೋಗ್ಯಾಧಿಕಾರಿ ಡಾ. ಪರುಶುರಾಮ ಹಿಟ್ನಳಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಆರ್ ಬಾಗವಾನ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರು ಮತ್ತು ಜಿಲ್ಲಾ ಆಸ್ಪತ್ರೆಯ ವೈದ್ಯಾಧಿಕಾರಿ ಮಹಾದೇವ ನಿಲಂಗಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸುರೇಶ ಹೊಸಮನಿ ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.
ನ್ಯುಮೋನಿಯಾ ಕೊನೆಗೊಳಿಸಲು ಸಾಮಾಜಿಕ ಜಾಗೃತಿ ಅಗತ್ಯ :ಡಾ.ಹುಬ್ಬಳ್ಳಿ
Related Posts
Add A Comment