ಜಿಲ್ಲಾ ಮಟ್ಟದ ವಿಕಲಚೇತನರ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಸಚಿವ ಡಾ. ಎಂ.ಬಿ.ಪಾಟೀಲ ಕರೆ
ವಿಜಯಪುರ: ವಿಶೇಷ ಚೇತನರು ತಮ್ಮಲ್ಲಿರುವ ಕೀಳರಿಮೆ ಭಾವನೆ ತೊರೆದು ಸಕಾರಾತ್ಮಕ ಯೋಚನೆಯೊಂದಿಗೆ ಸರ್ಕಾರದ ವಿವಿಧ ಯೋಜನೆಗಳ ಸದುಪಯೋಗ ಪಡೆದುಕೊಂಡು ಸ್ವಾವಲಂಬಿಗಳಾಗಿ ಜೀವನ ನಡೆಸುವಂತೆ ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಕರೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಸೋಮವಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಣದಲ್ಲಿ ಹಮ್ಮಿಕೊಂಡ ಜಿಲ್ಲಾ ಮಟ್ಟದ ವಿಕಲಚೇತನರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗೆ ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ವಿಶೇಷಚೇತನರಿಗೆ ಕೇವಲ ಸಹಾನುಭೂತಿ ಒದಗಿಸದೇ, ಅವರಿಗೂ ಅವಕಾಶ ಕಲ್ಪಿಸಿಕೊಟ್ಟು ಸ್ವಾವಲಂಬಿಗಳನ್ನಾಗಿಸಿ ಸಮಾಜದ ಮುಖ್ಯವಾಹಿನಿಗೆ ತರುವ ಮನೋಭಾವ ಬೆಳೆಸಿಕೊಳ್ಳಬೇಕು. ಸರ್ಕಾರವು ಸಹ ವಿಶೇಷಚೇತನರು ಆರ್ಥಿಕವಾಗಿ ಸದೃಢರಾಗಿ ಸ್ವಾವಲಂಬಿ ಬದುಕಿ ಸುಂದರ ಬದುಕು ರೂಪಿಸಿಕೊಳ್ಳಲು ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ವಿಶೇಷಚೇತನರು ಯಾವುದೇ ಸಂದರ್ಭದಲ್ಲೂ ದೃತಿಗೆಡದೆ ಧೈರ್ಯದಿಂದ ಪರಿಸ್ಥಿತಿಯನ್ನು ಎದುರಿಸಬೇಕು. ಧೃಢ ವಿಶ್ವಾಸ, ಆತ್ಮಸ್ಥೈರ್ಯದಿಂದ ಮುನ್ನುಗ್ಗಿ ನಾನೂ ಯಾರಿಗೂ ಕಡಿಮೆ ಇಲ್ಲ ಎಂಬ ಭಾವನೆ ಬೆಳೆಸಿಕೊಳ್ಳಬೇಕು. ಜಗತ್ತಿನ ಶ್ರೇಷ್ಠ ವಿಜ್ಞಾನಿಗಳು, ಸಾಧಕರಿಗೆ ಸಾಧನೆಗೈಯ್ಯಲು ವಿಕಲತೆ ಅಡ್ಡಿಯಾಗಲಿಲ್ಲ, ಅದನ್ನು ಮೀರಿ ಅವರು ತಮ್ಮ ಸಾಧನೆಯನ್ನು ಜಗತ್ತಿಗೆ ಸಾರಿದ್ದಾರೆ. ಜಗತ್ತಿಗೆ ಇವರು ದಾರಿದೀಪವಾಗಿದ್ದಾರೆ. ಇಂತಹ ಸಾಧಕರಿಂದ ಪ್ರೇರಣೆಗೊಂಡು ನೀವು ಸಹ ಜೀವನದಲ್ಲಿ ಏನನ್ನಾದರೂ ಸಾಧಿಸಬೇಕೆಂಬ ಛಲದೊಂದಿಗೆ ಬದುಕುವ ಮೂಲಕ ಉತ್ತಮ ಜೀವನ ನಿರ್ವಹಣೆ ಮಾಡಬೇಕು. ವಿಶೇಷ ಚೇತನರ ಪಾಲಕ-ಪೋಷಕರು ಸಹ ತಮ್ಮ ಮಗುವಿನ ಬಗ್ಗೆ ನಿರ್ಲಕ್ಷ್ಯ ವಹಿಸದೆ ಉತ್ತಮ ಶಿಕ್ಷಣ, ಪ್ರೇರಣೆ ನೀಡುವ ಮೂಲಕ ಸಾಧಕರನ್ನಾಗಿಸುವೆಡೆಗೆ ಚಿಂತಿಸಬೇಕು ಎಂದು ಹೇಳಿದರು.
ಬಿಎಲ್‌ಡಿಇ ಸಂಸ್ಥೆಯಲ್ಲಿ ವಿಕಲಚೇತನರಿಗೆ ಹಲವು ಆರೋಗ್ಯ ಸೇವೆಗಳನ್ನು ಒದಗಿಸುವ ಕಾರ್ಯ ಮಾಡಲಾಗುತ್ತಿದೆ ಎಂದು ಹೇಳಿದರು.
ವಿಶೇಷಚೇತನರು ಅಂಗವೈಕಲ್ಯತೆಯನ್ನು ಸವಾಲಾಗಿ ಸ್ವೀಕರಿಸಬೇಕು. ಕ್ರೀಡಾಕೂಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳು ಉತ್ತಮ ಪ್ರದರ್ಶನ ನೀಡುವ ಮೂಲಕ ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವಂತೆ ಹಾರೈಸಿದ ಅವರು, ತನ್ನಲ್ಲಿರುವ ಕೀಳರಿಮೆಯನ್ನು ತೊಡೆದು ಹಾಕಿ, ತಮ್ಮಲ್ಲಿರುವ ಪ್ರತಿಭೆಯಿಂದ ಉತ್ತಮ ಸಾಧೆನಗೈಯ್ಯುವಂತೆ ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಸಿ.ಬಿ.ದೇವರಮನಿ, ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿ ರಾಜಶೇಖರ ಧೈವಾಡಿ, ಯುವಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಎಸ್.ಜಿ.ಲೋಣಿ, ವಿಜಯಪುರ ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕೆ.ಹೊಂಗಯ್ಯ, ಡಾ.ಜಾವೀದ ಜಮಾದಾರ, ನಾಗರಾಜ್ ಲಂಬು, ಸಂಜೀವ ಖೋತ, ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು

