ವಿಜಯಪುರ: ಮಾನವ ಹಕ್ಕುಗಳ ಪಾಲನೆ ಮಾಡುವುದು ಪ್ರತಿಯೊಬ್ಬ ನಾಗರಿಕರ ಹೊಣೆಯಾಗಿದ್ದು, ಮಾನವ ಹಕ್ಕುಗಳ ಉಲ್ಲಂಘನೆಯಾಗದಂತೆ ಪರಿಪಾಲಿಸುವ ಜವಾಬ್ದಾರಿ ನಮ್ಮದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರು ಅಭಿಮತ ವ್ಯಕ್ತಪಡಿಸಿದರು.
ಭಾನುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆಗೆ ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾನವ ಹಕ್ಕುಗಳ ದಿನಾಚರಣೆಯ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದ ಅವರು, ಹಕ್ಕು ಮತ್ತು ಕರ್ತವ್ಯಗಳನ್ನು ಸರಿಯಾಗಿ ಪಾಲನೆ ಮಾಡಬೇಕು. ಮಾನವ ಹಕ್ಕುಗಳ ಪಾಲನೆ ಕುರಿತು ಮಕ್ಕಳಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು.
ಮಾನವ ಹಕ್ಕುಗಳು ಸ್ವಾಭಾವಿಕವಾಗಿ ಪ್ರದತ್ತವಾದ ಹಕ್ಕುಗಳಾಗಿವೆ. ರಕ್ಷಣೆಗೆ ಆಯೋಗ ಇವೆ. ರಾಜ್ಯದಲ್ಲಿಯೂ ಸಹ ರಾಜ್ಯ ಮಾನವ ಹಕ್ಕುಗಳ ಆಯೋಗವು ಕಾರ್ಯ ನಿರ್ವಹಿಸುತ್ತಿದೆ.ಮಾನವ ಹಕ್ಕುಗಳ ಕುರಿತು ಜಾಗೃತಿ ಹೊಂದಬೇಕು. ನಮ್ಮ ಕರ್ತವ್ಯಗಳನ್ನು ಸಹ ನಿಷ್ಠೆಯಿಂದ ನಿರ್ವಹಿಸಬೇಕು. ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬಂತೆ ಪ್ರತಿಯೊಬ್ಬ ವ್ಯಕ್ತಿ ಘನತೆ ಹೊಂದಿರುತ್ತಾನೆ. ಘನತೆಗೆ ಕುಂದು ಬಾರದಂತೆ ನಡೆದುಕೊಳ್ಳಬೇಕು ಎಂದು ಹೇಳಿದರು.
ಹಕ್ಕುಗಳ ಉಲ್ಲಂಘನೆ ತಡೆಯುವುದು, ರಕ್ಷಣೆ ನೀಡುವುದು ಉಲ್ಲಂಘನೆಗೊಳಗಾದವರಿಗೆ ನೆರವು ಒದಗಿಸುವುದು ಮಾನವ ಹಕ್ಕುಗಳ ಆಯೋಗದ ಉದ್ಧೇಶವಾಗಿದೆ. ಜೀವನದ ಸ್ವಾತಂತ್ರ‍್ಯ, ಸಮಾನತೆ ಮತ್ತು ವ್ಯಕ್ತಿ ಘನತೆ ಎತ್ತಿಹಿಡಿಯುವ ಹಕ್ಕುಗಳೇ ಮಾನವ ಹಕ್ಕುಗಳು. ಎಲ್ಲರೂ ಹುಟ್ಟಿನಿಂದ ಘನತೆ ಮತ್ತು ಹಕ್ಕುಗಳಲ್ಲಿ ಸಮಾನರು. ಪ್ರತಿಯೊಬ್ಬರೂ ಹಕ್ಕುಗಳನ್ನು ಮತ್ತು ಸ್ವಾತಂತ್ರ‍್ಯವನ್ನು ಹೊಂದಿರುತ್ತಾರೆ. ಪ್ರತಿಯೊಬ್ಬರೂ ಸಹ ನೈಸರ್ಗಿಕವಾಗಿ ಬಂದಂತಹ ಹಕ್ಕುಗಳನ್ನು ಸಹ ಪಡೆದಿರುತ್ತಾರೆ. ಪ್ರತಿಯೊಬ್ಬರಿಗೂ ಘನತೆಯಿಂದ ಜೀವಿಸುವ ಹಕ್ಕು ಇದೆ. ನಮ್ಮ ಸಂವಿಧಾನವು ಸಹ ಎಲ್ಲ ವ್ಯಕ್ತಿಗಳ ಮಾನವ ಹಕ್ಕುಗಳನ್ನು ಗೌರವಿಸಬೇಕೆಂದು ಹೇಳುತ್ತದೆ. ಆದ್ದರಿಂದ ಪ್ರತಿಯೊಬ್ಬರ ಹಕ್ಕುಗಳನ್ನು ಸಂರಕ್ಷಣೆ ಮಾಡಬೇಕು. ವಿದ್ಯಾರ್ಥಿಗಳು ಮಾನವ ಹಕ್ಕುಗಳ ಬಗ್ಗೆ ತಿಳಿದುಕೊಂಡು ಸಂರಕ್ಷಣೆಗೆ ಕಟಿಬದ್ಧರಾಗಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಆರ್.ಸಿ ಹಿರೇಮಠ ಅವರು ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ವಿಜಯಪುರ ಉಪ ವಿಭಾಗಾಧಿಕಾರಿ ಬಸಣೆಪ್ಪ ಕಲಶೆಟ್ಟಿ, ವಿಜಯಪುರ ತಹಶೀಲ್ದಾರರಾದ ಶ್ರೀಮತಿ ಕವಿತಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಈರಣ್ಣ ಆಶಾಪುರ, ವಾರ್ತಾಧಿಕಾರಿ ಅಮರೇಶ ದೊಡಮನಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಅಧಿಕಾರಿ ರಾಜಶೇಖರ ದೈವಾಡಿ, ಡಾ. ಸುರೇಶ ಚವ್ಹಾಣ,ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಸಂಪತ್ ಗುಣಾರಿ,ಜಿಲ್ಲಾಧಿಕಾರಿ ಕಚೇರಿಯ ಡಿ.ವೈ.ಕಟ್ಟಿಮನಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ವಿವಿಧ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಬೊಧಕ ಸಿಬ್ಬಂದಿ ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

